ಪಡಿತರ ಧಾನ್ಯವನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ

ಬೆಳಗಾವಿ,ಡಿ.14- ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಫಲಾನುಭವಿಗಳಿಗೆ ನೀಡುತ್ತಿರುವ ಪಡಿತರ ಧಾನ್ಯವನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿಕೊಂಡರೆ ಅಂಥವರ ಪಡಿತರಚೀಟಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಜಮೀರ್ ಅಹಮ್ಮದ್ ಖಾನ್ ಎಚ್ಚರಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕುಟುಂಬದವರು ಹಸಿವಿನಿಂದ ಬಳಲಬಾರದು ಎಂಬ ಕಾರಣಕ್ಕಾಗಿ ಉಚಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.ಕೆಲವು ಕಡೆ ಫಲಾನುಭವಿಗಳು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ.

ಇದಕ್ಕಾಗಿ ಇಲಾಖಾ ಮಟ್ಟದಲ್ಲಿ ಸ್ಕ್ವಾಡ್ ರಚನೆ ಮಾಡಲಾಗಿದೆ. ಯಾರಾದರೂ ಅಕ್ಕಿಯನ್ನು ಮಾರಾಟ ಮಾಡಿ ಸಿಕ್ಕಿಬಿದ್ದರೆ ಅಂಥವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿದ್ದ ವಂಚನೆಯನ್ನು ತಡೆಗಟ್ಟಲು ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲಾಯಿತು. ಈ ವ್ಯವಸ್ಥೆ ಜಾರಿ ಆದ ಮೇಲೆ ಸರ್ಕಾರದ ಬೊಕ್ಕಸಕ್ಕೆ 588 ಕೋಟಿ ಉಳಿತಾಯವಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಸುಮಾರು 20013 ನ್ಯಾಯಬೆಲೆ ಅಂಗಡಿಗಳು ಇವೆ. ಇದರಲ್ಲಿ 19 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ಬಯೋಮೆಟ್ರಿಕ್ ಅಳವಡಿಸಲಾಗಿದೆ.
ಕರಾವಳಿ, ಮಲೆನಾಡು, ಕೊಡಗು ಮತ್ತಿತರ ಕಡೆ ತಾಂತ್ರಿಕ ಕಾರಣಗಳಿಂದ ಬಯೋಮೆಟ್ರಿಕ್ ಅಳವಡಿಸಲು ಸಾಧ್ಯವಾಗಿಲ್ಲ. ಈ ಪದ್ಧತಿ ಜಾರಿ ಬಂದ ಮೇಲೆ ಸುಳ್ಳು ಮಾಹಿತಿ ನೀಡಲು ಸಾಧ್ಯವಿಲ್ಲ. ಜೊತೆಗೆ ಆಧಾರ್ ಲಿಂಕ್ ಅಳವಡಿಕೆ ಮಾಡಿರುವುದರಿಂದ ಇದರಲ್ಲಿ ಯಾವುದೇ ರೀತಿಯ ಮೋಸ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಲೆಕ್ಕ ತೋರಿಸುವುದು, ಕಾಳಸಂತೆಯಲ್ಲಿ ಮಾರಾಟ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೂ 81 ಜನರ ವಿರುದ್ದ ಎಫ್‍ಐಆರ್ ದಾಖಲಿಸಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ