ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ಈ ಮೂರು ರಾಜ್ಯಗಳಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದ ಕಾಂಗ್ರೆಸ್ ಗೆ ಮುಖ್ಯಮಂತ್ರಿಗಳ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿತ್ತು, ಪ್ರಮುಖವಾಗಿ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ದೇಶಾದ್ಯಂತ ಮನೆ ಮಾಡಿತ್ತು. ಅಂತಿಮವಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಗೆ ರಾಜಸ್ಥಾನ ಸಿಎಂ ಪಟ್ಟ ಅಂತಿಮವಾಗಿದ್ದು, ಕುತೂಹಲಕ್ಕೆ ಕಾಂಗ್ರೆಸ್ ತೆರೆ ಎಳೆದಿದೆ.
ರಾಜಸ್ಥಾನದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಸರತ್ತು ಕೊನೆಗೂ ಪೂರ್ಣಗೊಂಡಿದೆ. ಎಲ್ಲ ಲೆಕ್ಕಾಚಾರದ ನಂತರ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಸಿಎಂ ರೇಸ್ನಲ್ಲಿದ್ದ ಸಚಿನ್ ಪೈಲಟ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ನಿರ್ಧರಿಸಲಾಗಿದ್ದು, ರಾಜಸ್ಥಾನದಲ್ಲಿ ಸರಳ ಬಹುಮತ ಪಡೆದಿರುವ ಕಾಂಗ್ರೆಸ್ ಈಗ ಸರಕಾರ ರಚನೆಗೆ ಸಿದ್ಧವಾಗಿದೆ.
ನವದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ನಡೆದ ಮ್ಯಾರಥಾನ್ ಸಭೆಯ ನಂತರ ವರಿಷ್ಠ ನಾಯಕರು ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ. 200 ವಿಧಾನಸಭೆ ಸ್ಥಾನಗಳ ರಾಜಸ್ಥಾನದಲ್ಲಿ 199 ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. 1 ಕ್ಷೇತ್ರದಲ್ಲಿ ಅಭ್ಯರ್ಥಿ ನಿಧನದಿಂದಾಗಿ ಚುನಾವಣೆ ಮುಂದೂಡಿಕೆಯಾಗಿತ್ತು. 199 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಶತಕ ಸಾಧನೆ ಸಾಧಿಸಿತ್ತು. 100 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಈಗ ಸರಕಾರ ರಚನೆಗೆ ಹಕ್ಕು ಮಂಡಿಸಲಿದೆ.
ಶಾಸಕಾಂಗ ಪಕ್ಷದ ನಾಯಕನಾಗಿ ಅಶೋಕ್ ಗೆಹ್ಲೋಟ್ ಆಯ್ಕೆಯಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ರೇಸ್ ರಾಹುಲ್ ಗಾಂಧಿ ಆಪ್ತ ಸಚಿನ್ ಪೈಲಟ್ ಕೂಡ ಇದ್ದರು. ಆದರೆ ಕೊನೆಗೆ ಅನುಭವಕ್ಕೆ ಮೊರೆ ಹೋಗಿರುವ ಕಾಂಗ್ರೆಸ್ ಅಶೋಕ್ ಗೆಹ್ಲೋಟ್ ಅವರನ್ನು ರಾಜಸ್ಥಾನದ ಸಿಎಂ ಆಗಿ ಆಯ್ಕೆ ಮಾಡಿದೆ.
ಇನ್ನು ರಾಜಸ್ಥಾನದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಆಗಿ ಕಾಂಗ್ರೆಸ್ ನೇಮಕ ಮಾಡಿದೆ.
Rajasthan,Congress,Ashok gehlot,CM,Sachin pilot,DCM