ಬೆಂಗಳೂರು, ಡಿ.16-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗುವುದು ಸನ್ನಿಹಿತವಾಗಿದೆ. ಇದೇ 22 ರಂದು ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ಸಂಸದೀಯ ಕಾರ್ಯದರ್ಶಿಗಳ ನೇಮಕ ಮಾಡಲು ನಿರ್ಧರಿಸಲಾಗಿದೆ.
ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ನವದೆಹಲಿಗೆ ತೆರಳಲಿದ್ದಾರೆ.
22 ರಂದು ಖಾಲಿ ಇರುವ ಕಾಂಗ್ರೆಸ್ನ ಪಾಲಿನ 6 ಸಚಿವ ಸ್ಥಾನದ ಪೈಕಿ ನಾಲ್ವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಬ್ಬರು ಹಿರಿಯ ಸದಸ್ಯರು ಸೇರಿದಂತೆ ನಾಲ್ವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ನಾಲ್ವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದ್ದು, 20ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳು ಇದ್ದಾರೆ.ಅಲ್ಲದೆ, ಬಹುತೇಕರು ಪ್ರಬಲ ಲಾಬಿ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ನಂತರ ಉಂಟಾಗುವ ಸಂಭಾವ್ಯ ಬಂಡಾಯ ತಪ್ಪಿಸಲು 10 ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.
ಕಾಂಗ್ರೆಸ್ವತಿಯಿಂದ 6, ಜೆಡಿಎಸ್ನಿಂದ ನಾಲ್ವರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಇದರಲ್ಲಿ ಒಬ್ಬರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ಉಳಿದವರಿಗೆ ಸಹಾಯಕ ಸಚಿವ ಸಂಪುಟ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.
ಇದಲ್ಲದೆ, 30 ಪ್ರಮುಖ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನೂ ಕೂಡ ಇದೇ ಸಂದರ್ಭದಲ್ಲಿ ನೇಮಿಸಲು ಮುಖಂಡರು ನಿರ್ಧರಿಸಿದ್ದಾರೆ. ಕಾಂಗ್ರೆಸ್ನ 20, ಜೆಡಿಎಸ್ನ 10 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಈಗಾಗಲೇ ಎಲ್ಲ ರೀತಿಯ ಚಟುವಟಿಕೆಗಳು ಪ್ರಾರಂಭವಾಗಿವೆ.
ಸಂಪುಟ ವಿಸ್ತರಣೆ ವಿಳಂಬದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದರಲ್ಲದೆ, ಸಚಿವ ಸ್ಥಾನ ಸಿಗದಿದ್ದರೆ ಪರ್ಯಾಯ ದಾರಿ ನೋಡಿಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು. ಸಚಿವಾಕಾಂಕ್ಷಿಗಳ ಈ ನಡೆ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿತ್ತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಪರಮೇಶ್ವರ್, ದಿನೇಶ್ಗುಂಡೂರಾವ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ಮುಖಂಡರು ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ,ನಿಗಮ ಮಂಡಳಿಗಳ ನೇಮಕದ ಜೊತೆಗೆ ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸುವ ನಿರ್ಧಾರ ಮಾಡಿದ್ದು, ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿದೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲೂ ಸಹಮತ ದೊರೆತಿದ್ದು, ಅಧಿವೇಶನ ಮುಗಿದ ಮರುದಿನವೇ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣ ಅಗತ್ಯ ಮತ್ತು ಅನಿವಾರ್ಯವಾಗಿದೆ. ಹೀಗಾಗಿ ಹಿರಿಯರು ಮತ್ತು ಕಿರಿಯರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು, ಸಂಸದೀಯ ಕಾರ್ಯದರ್ಶಿಗಳ ನೇಮಕ ಮಾಡುವುದು, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮಾಡುವ ಮೂಲಕ ಯಾವುದೇ ರೀತಿ ಅತೃಪ್ತಿ, ಬಂಡಾಯ ತಲೆದೋರದಂತೆ ಎಚ್ಚರ ವಹಿಸಲಾಗಿದೆ.
ಹಿರಿಯ ಸದಸ್ಯರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ತುಕಾರಾಮ್, ಸಿ.ಎಸ್.ಶಿವಳ್ಳಿ, ಬಿ.ಸಿ.ಪಾಟೀಲ್, ಸಂಗಮೇಶ್, ಸುಧಾಕರ್ ಸೇರಿದಂತೆ ಹಲವರು ಸಚಿವಾಕಾಂಕ್ಷಿಗಳಾಗಿದ್ದಾರೆ.
ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬಂದಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಸಭಾಪತಿ ಆಯ್ಕೆಯಲ್ಲಿ ಕಾಂಗ್ರೆಸ್ನ ಹಿರಿಯ ಸದಸ್ಯ ಎಸ್.ಆರ್.ಪಾಟೀಲ್ ಅವರಿಗೆ ಅವಕಾಶ ದೊರೆಯಲಿಲ್ಲ. ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವರಾಗಿದ್ದ ಇವರನ್ನು ಕೈ ಬಿಡಲಾಗಿತ್ತು. ಅಲ್ಲಿಂದ ಈವರೆಗೂ ಅವರಿಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಸಭಾಪತಿ ಸ್ಥಾನವೂ ಕೊನೆ ಕ್ಷಣದಲ್ಲಿ ಕೈ ತಪ್ಪಿತು.
ಉತ್ತರ ಕರ್ನಾಟಕದವರಿಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬಂದಿತ್ತು. ಹಾಗಾಗಿ ಈ ಬಾರಿ ಉತ್ತರಕರ್ನಾಟಕದ ಎಂ.ಬಿ.ಪಾಟೀಲ್ ಅಥವಾ ಎಸ್.ಆರ್.ಪಾಟೀಲ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದೇ ರೀತಿ 7 ಬಾರಿ ಶಾಸಕರಾಗಿರುವ ಹಿರಿಯ ಸದಸ್ಯ, ಮಾಜಿ ಸಚಿವ ರಾಮಲಿಂಗಾರೆಡ್ಡಿ , ಎಚ್.ಕೆ.ಪಾಟೀಲ್ ಅವರ ಹೆಸರುಗಳೂ ಕೂಡ ಕೇಳಿ ಬಂದಿವೆ. ಯಾರಿಗೆ ಸಚಿವ ಸ್ಥಾನ , ಯಾರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ, ಯಾವ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ದೊರೆಯುತ್ತದೆಯೋ ಕಾದು ನೋಡಬೇಕು.
ಇದೇ 18 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪವಾಗುವ ಸಾಧ್ಯತೆ ಕೂಡ ಇದೆ. 21 ರಂದು ರಾಜ್ಯ ನಾಯಕರು ದೆಹಲಿಗೆ ತೆರಳಿ 22 ಅಥವಾ ಡಿಸೆಂಬರ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಸುವ ಸಾಧ್ಯತೆ ಇದೆ.