ಶಿವಮೊಗ್ಗ: ರಾಜ್ಯ ಸರ್ಕಾರ, ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಪರೀಕ್ಷೆಗೆ ಆದೇಶ ಮಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡ್ಯೂರಪ್ಪ ಹೇಳಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸುಳ್ವಾಡಿ ದೇವಾಲಯದಲ್ಲಿ ದ್ವೇಷದ ಹಿನ್ನೆಲೆಯಲ್ಲಿ ಪ್ರಸಾದಕ್ಕೆ ವಿಷ ಬೆರೆಸಲಾಗಿದ್ದ ವಿಚಾರಕ್ಕೆ ಸಂಬಂಧಿಸದಂತೆ, ಪ್ರತಿಕ್ರಿಯಿಸಿದ್ದಾರೆ. ಸುಳ್ವಾಡಿ ಕಚ್ ಕುತ್ ಮಾರಮ್ಮ ದೇವಾಲಯ ಪ್ರಕರಣದ ಹಿನ್ನೆಲೆಯಲ್ಲಿ, ಇದೀಗ ಎಲ್ಲಾ ಧಾರ್ಮಿಕ ದೇವಾಲಯಗಳಲ್ಲಿನ ಪ್ರಸಾದ ಪರೀಕ್ಷೆಗೆ ರಾಜ್ಯ ಸರ್ಕಾರ, ಆದೇಶ ನೀಡಿರುವುದು ಸರಿಯಲ್ಲ. ಯಾರು ವಿಷ ಬೆರೆಸಿದ್ದಾರೆ ಅವರಿಗೆ ಶಿಕ್ಷೆಗೆ ಗುರಿಪಡಿಸಬೇಕು. ಅವರಿಗೆ ಜೈಲಿಗೆ ಕಳಿಸಬೇಕೆಂದು ಯಡ್ಯೂರಪ್ಪ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಸದನದಲ್ಲಿ ಪ್ರಮುಖವಾಗಿ 2 ಅಂಶಗಳ ಬಗ್ಗೆ ಚರ್ಚೆಯಾಗಬೇಕಿದೆ. ಒಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುಂಠಿತವಾಗಿದೆ. ಮತ್ತೊಂದು, ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸದೇ, ಸಮಸ್ಯೆಯುಂಟಾಗಿದ್ದು, ಮುಖ್ಯಮಂತ್ರಿಗಳು ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆಯೇ ಹೊರತು ಅಭಿವೃದ್ಧಿಯತ್ತ ಗಮನ ಹರಿಸುತ್ತಿಲ್ಲ ಎಂದು ಟೀಕೆ ಮಾಡಿದ್ದಾರೆ. ಅದರಂತೆ, ನಾನು ಇಂದು ಸಂಜೆ ಬೆಳ ಬೆಳಗಾವಿಗೆ ತೆರಳಲಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೆನೆ ಎಂದಿದ್ದಾರೆ. ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮನ್ನಾ ಎಂದು ಕಾಲಹರಣ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ರಾಷ್ಟ್ರಿಕೃತ ಬ್ಯಾಂಕ್ ಗಳು ಯಾವುದೇ ಕಾರಣಕ್ಕೂ ಋಣಮುಕ್ತ ಪತ್ರ ನೀಡಲು ಸಾಧ್ಯವಿಲ್ಲ ಎನ್ನುತ್ತಿವೆ. ಮುಖ್ಯಮಂತ್ರಿಗಳು ಈ ಬಗ್ಗೆಯೂ ಗಮನಹರಿಸದೇ, ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಯಡ್ಯೂರಪ್ಪ ಹೇಳಿದ್ದಾರೆ. ಇದೇ ವೇಳೆ ಅವರು, ಪಂಚರಾಜ್ಯ ಚುನಾವಣೆ ಫಲಿತಾಂಶ, ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.