ಬೆಂಗಳೂರು, ಡಿ.22- ಕಾಂಗ್ರೆಸ್ ಪಕ್ಷ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನದ ಹೊಣೆಯನ್ನು ಪಕ್ಷದ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಅವರಿಗೆ ವಹಿಸಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರ ಸ್ಥಾನವನ್ನು ಎಚ್.ಕೆ.ಪಾಟೀಲ್ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಸಂಪುಟದಲ್ಲಿ ಎಚ್.ಕೆ.ಪಾಟೀಲ್ ಅವರಿಗೆ ಅವಕಾಶ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಚ್.ಕೆ.ಪಾಟೀಲ್ ಅವರಿಗೆ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಎಚ್.ಕೆ.ಪಾಟೀಲ್ ಅವರು ಪಕ್ಷದ ಪ್ರಚಾರ ಸಾರಥ್ಯ ವಹಿಸಲಿದ್ದಾರೆ. ಈ ಮೂಲಕ ಹಿರಿಯರ ಅಸಮಾಧಾನವನ್ನು ತಣಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಿದೆ.