ಬೆಂಗಳೂರು, ಡಿ.23-ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಹೈಕಮಾಂಡ್‍ಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಈ ಸಂಬಂಧ ಬಿಬಿಎಂಪಿ ಸದಸ್ಯರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಕಾಂಗ್ರೆಸ್ ಪದಾಧಿಕಾರಿಗಳು ಸಭೆ ಸೇರಿ ಪಕ್ಷದ ನಿಷ್ಠಾವಂತ ಹಾಗೂ ಹಿರಿಯ ಮುಖಂಡರಾದ ರಾಮಲಿಂಗಾರೆಡ್ಡಿ ಅವರಿಗೆ ಆಗಿರುವ ಅನ್ಯಾಯದ ಬಗ್ಗೆ ಚರ್ಚಿಸಿ ಸರಿಪಡಿಸುವಂತೆ ಆಗ್ರಹಿಸಿ ಹೈಕಮಾಂಡ್‍ಗೆ ಮನವಿ ಸಲ್ಲಿಸಲಿದ್ದಾರೆ.
ಹಿರಿತನ ಮತ್ತು ಅನುಭವವನ್ನು ಆಧರಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಸಮ್ಮಿಶ್ರ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ರಾಮಲಿಂಗಾರೆಡ್ಡಿ ಅವರಿಗೆ ಪ್ರಾತಿನಿಧ್ಯ ನೀಡದಿರುವುದು ಅವರ ಬೆಂಬಲಿಗರಿಗೆ ಮತ್ತು ಕಾರ್ಯಕರ್ತರಿಗೆ ತೀವ್ರ ಅಸಮಾಧಾನ ಉಂಟು ಮಾಡಿದೆ. ಸಂಪುಟದಲ್ಲಾದರೂ ಸ್ಥಾನ ಕಲ್ಪಿಸಬೇಕು ಅಥವಾ ಪಕ್ಷದಲ್ಲಾದರೂ ಉನ್ನತ ಸ್ಥಾನ ನೀಡಬೇಕೆಂಬುದು ಕಾರ್ಯಕರ್ತರ ಆಗ್ರಹವಾಗಿದೆ.
ನಿನ್ನೆ ಕೂಡ ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ನಾಳೆ ಬೆಂಗಳೂರು ನಗರ ಜಿಲ್ಲಾ ಪ್ರಚಾರ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಹೈಕಮಾಂಡ್ ಮೇಲೆ ಒತ್ತಡ ತರಲು ನಿರ್ಧರಿಸಲಾಗಿದೆ.