ಬೆಂಗಳೂರು, ಡಿ.24- ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಚನ್ನೇನಹಳ್ಳಿಯಲ್ಲಿ ಗ್ರಾಮ ಪಂಚಾಯತಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ಹಾಗೂ ಸವಲತ್ತುಗಳನ್ನು ತ್ವರಿತವಾಗಿ ತಲುಪಿಸಲು ಸುಸಜ್ಜಿತ ಸ್ವಂತ ಗ್ರಾಮ ಪಂಚಾಯತಿ ಕಟ್ಟಡದ ಅವಶ್ಯಕತೆ ಇರುವುದನ್ನು ಮನಗಂಡು ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಜನಸೇವಾ ವಿದ್ಯಾಸಂಸ್ಥೆಯವರು ಸ್ಥಳವನ್ನು ದಾನವಾಗಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಸಹಕಾರ ನೀಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ರಾಧಿಕಾ ರಮೇಶ್, ಉಪಾಧ್ಯಕ್ಷೆ ಭವ್ಯಾ ಕುಮಾರಸ್ವಾಮಿ, ಕಾರ್ಯದರ್ಶಿ ತಿಮ್ಮಯ್ಯ, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನೋಮೇಶ್ ಕುಮಾರ್, ಜನಸೇವಾ ಟ್ರಸ್ಟ್ ಗೌರವ ಕಾರ್ಯದರ್ಶಿ ನಿರ್ಮಲ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ನರಹರಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.