ಬೆಂಗಳೂರು: ಒಂದು ಕಡೆ ಸಂಪುಟ ವಿಸ್ತರಣೆಯಿಂದ ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರು ಸಭೆ ನಡೆಸಲು ಸಿದ್ಧತೆ ನಡೆಸುತ್ತಿದ್ದರೆ, ಇತ್ತ ‘ಕೈ’ ನಾಯಕರಿಗೆ ಟೆನ್ಶನ್ ಆರಂಭವಾಗಿದೆ. ಹಾಗಾಗಿ ಕಾಂಗ್ರೆಸ್ ನಾಯಕರು ಇಂದು ತಮ್ಮ ಪ್ರವಾಸ ರದ್ದು ಮಾಡಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ.
ಸಂಪುಟ ವಿಸ್ತರಣೆಯಿಂದ ಕೈ ಬಿಟ್ಟಿದ್ದಕ್ಕೆ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕ ಶಾಸಕರು ಅಸಮಾಧಾನಗೊಂಡಿದ್ದು, ಇಂದು ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆ ವೇಳೆ ಮುಂದಿನ ನಿರ್ಧಾರಗಳ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇದು ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಆತಂಕ ಉಂಟು ಮಾಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ವಿವಿಧ ಪ್ರವಾಸ ರದ್ದು ಮಾಡಿದ್ದಾರೆ. ರಮೇಶ ಜಾರಕಿಹೊಳಿ ಮತ್ತು ಆಪ್ತ ಶಾಸಕರು ಬಿಜೆಪಿಯತ್ತ ಮುಖ ಮಾಡುವ ಸಾಧ್ಯತೆ ಇರುವುದರಿಮದ ಕಾಂಗ್ರೆಸ್ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ, ದಿನೇಶ ಗುಂಡೂರಾವ, ಈಶ್ವರ ಖಂಡ್ರೆ ಜಮಖಂಡಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಬೆಂಗಳೂರಿನಲ್ಲೇ ಇದ್ದು, ಅತೃಪ್ತ ಶಾಸಕರ ಮನವೊಲಿಸಲು ಅವರು ನಿರ್ಧರಿಸಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಯಾವುದೇ ಕುತ್ತು ಬರದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ.