ದೆಹಲಿ ಪ್ರವಾಸ ಕೈಗೊಂಡಿರುವ ಸಿ.ಎಂ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ

ಬೆಂಗಳೂರು, ಡಿ.26- ಇಂದು ಮತ್ತು ನಾಳೆ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಇತ್ತೀಚೆಗೆ ರಾಜ್ಯದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ, ಪ್ರಚಲಿತ ರಾಜಕೀಯ ವಿದ್ಯಮಾನ, ಕಾಂಗ್ರೆಸ್‍ನಲ್ಲಿ ಬಂಡಾಯ ಇನ್ನಿತರ ಪ್ರಮುಖ ವಿಷಯಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಹುಲ್‍ಗಾಂಧಿ ಅವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದ್ದು, ದೆಹಲಿಗೆ ಮಾಜಿ ಪ್ರಧಾನಿ ದೇವೇಗೌಡರು ಸಹ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ರಾಜ್ಯದ ನೀರಾವರಿ, ರೈಲ್ವೆ ಮತ್ತಿತರ ಇಲಾಖೆಗಳ ಹಲವು ಪ್ರಸ್ತಾವನೆಗಳಿಗೆ ಕೇಂದ್ರದಿಂದ ಒಪ್ಪಿಗೆ ಪಡೆಯುವ ಸಂಬಂಧ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಿದ್ದು, ಇದೇ ಸಂದರ್ಭದಲ್ಲಿ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಇದನ್ನು ಖಚಿತಪಡಿಸಿರುವ ಮುಖ್ಯಮಂತ್ರಿಗಳು ಸಮಯಾವಕಾಶ ಸಿಕ್ಕರೆ ಎಐಸಿಸಿ ಅಧ್ಯಕ್ಷರನ್ನು ಸಂಪರ್ಕಿಸುವುದಾಗಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ದೆಹಲಿ ಭೇಟಿ ಸಂದರ್ಭದಲ್ಲಿ ಅವಕಾಶ ದೊರಕಿದರೆ ಎಐಸಿಸಿ ವರಿಷ್ಠರಾದ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸುವ ಬಗ್ಗೆ ಹೇಳಿದ್ದಾರೆ.

ಜೆಡಿಎಸ್ ಮುಖಂಡನ ಹತ್ಯೆ ಕುರಿತಂತೆ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ. ಮುಖ್ಯಮಂತ್ರಿಯಾಗುವುದಕ್ಕೂ ಮುನ್ನ ನಾನು ಒಬ್ಬ ಮನುಷ್ಯ. ಭಾವನಾತ್ಮಕವಾಗಿ ಸ್ಪಂದಿಸಿದ್ದೇನೆ. ಆ ಕುಟುಂಬದ ಸ್ಥಿತಿ ನೋಡಿ ಈ ಪದ ಬಳಕೆ ಮಾಡಿದ್ದೆ. ಈ ಬಗ್ಗೆ ಮತ್ತೆ ಪ್ರಸ್ತಾಪ ಬೇಡ ಎಂದು ತಿಳಿಸಿದರು.
ಯಾರ ಕಷ್ಟ ನೋಡಿದರೂ ತಕ್ಷಣ ಸ್ಪಂದಿಸುತ್ತೇನೆ ಅಷ್ಟೇ. ಈ ಬಗ್ಗೆ ಬಿಜೆಪಿಯವರು ಕ್ಷಮೆ ಯಾಚಿಸಬೇಕು ಎಂದು ಹೇಳಿರುವುದು ಸರಿಯಲ್ಲ.

.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾವೇರಿಯಲ್ಲಿ ಗೋಲಿಬಾರ್ ನಡೆದ ಬಗ್ಗೆ ಅವರು ಮಾತನಾಡಲಿ ಎಂದು ತಿರುಗೇಟು ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ