ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ

ನವದೆಹಲಿ: ಮೇಕೆದಾಟು ಯೋಜನೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಗಡ್ಕರಿ ಭೇಟಿ ಮಾಡಿ ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ವಾಸ್ತವವಾಗಿ ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೆ, ಅದರಲ್ಲೂ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು. ಈ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ, ಈ ವಿಷಯವನ್ನು ಬಗೆಹರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರು ಸಭೆ ನಡೆಸಲು ಸಹಮತಿ ವ್ಯಕ್ತಪಡಿಸಿದರು.

ಮಹಾದಾಯಿ ನ್ಯಾಯಾಧಿಕರಣ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ರಾಜ್ಯದ ಪಾಲಿನ ನೀರಿನ ಬಳಕೆಗೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಗಡ್ಕರಿ ಅವರು ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ