ಬೆಂಗಳೂರು, ಡಿ.26- ಹಿಂಗಾರು ಹಂಗಾಮಿನಲ್ಲಿ 61 ತಾಲ್ಲೂಕುಗಳು ಸಾಧಾರಣ ಬರ ಸಮಸ್ಯೆ ಎದುರಿಸುತ್ತಿದ್ದರೆ, 95 ತಾಲ್ಲೂಕುಗಳು ತೀವ್ರ ಬರದಿಂದ ನಲುಗವೆ. ಒಟ್ಟು 156 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕಗಳೆಂದು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಸುದ್ಧಿಗೋಷ್ಠಿಯಲ್ಲಿ ಹೇಳಿದರು.
2016ರ ಬರ ನಿರ್ವಹಣೆ ಕೈಪಿಡಿಯ ಮಾರ್ಗ ಸೂಚಿ ಪ್ರಕಾರ ಹಿಂಗಾರು ಹಂಗಾಮಿನಲ್ಲಿ 156 ತಾಲ್ಲೂಕುಗಳು ಪರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.
ಬೆಳೆ ಹಾನಿ, ಮಳೆ ಕೊರತೆ ಮುಂತಾದ ಮಾಹಿತಿಗಳನ್ನು ಪಡೆದು ತೀವ್ರ ಹಾಗೂ ಸಾಧಾರಣ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಅಲ್ಲದೆ, ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಬೆಳೆ ನಷ್ಟದ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಹಿಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಶೇ.49ರಷ್ಟು ಮಳೆ ಕೊರತೆ ಉಂಟಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.66ರಷ್ಟು ಮಳೆ ಕೊರತೆ ಉಂಟಾಗಿದೆ. 31.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ, ಡಿ.21ರವರೆಗೆ 26.03ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ ಎಂದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಲು ಸಿದ್ದತೆ ನಡೆಸಲಾಗಿದೆ.
ಮುಂಗಾರು ಹಂಗಾಮಿನಲ್ಲಿ 8 ಜಿಲ್ಲೆಗಳ 45 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, 100 ತಾಲ್ಲೂಕುಗಳನ್ನು ಪರಪೀಡಿತ ಪ್ರದೇಶ ಎಂದು ಘೋಷಿಸಲಾಗಿತ್ತು. ಪ್ರವಾಹದಿಂದ ಬೆಳೆ ಹಾನಿಯಾಗಿದ್ದ ರೈತರಿಗೆ ಇನ್ಫುಟ್ ಸಬ್ಸಿಡಿ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ 6343 ರೈತರ ಬ್ಯಾಂಕ್ ಖಾತೆಗಳಿಗೆ 6.50 ಕೋಟಿ ರೂ. ಪಾವತಿಸಲಾಗಿದೆ. ಮೂಲ ಸೌಲಭ್ಯಗಳಿಗೆ ಆಗಿರುವ ಹಾನಿಗೆ ಸಂಬಂಧಿಸಿದಂತೆ 214.03 ಕೋಟಿ ರೂ.ಗಳನ್ನು ಜಿಲ್ಲಾವಾರು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ನಗರೇಗಾ ಯೋಜನೆಯಡಿ ಉದ್ಯೋಗ ಒದಗಿಸಲು ಕ್ರಮಕೈಗೊಳ್ಳಲಾಗಿದೆ. ಈಗಾಗಲೇ 17 ಜಿಲ್ಲೆಗಳ 283 ಗ್ರಾಮಗಳಲ್ಲಿ 524 ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಮಾಡಲಾಗಿದೆ. 310 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರಿನ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ವಾರ್ಡ್ಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಗರಾಭಿವೃದ್ಧಿ ಇಲಾಖೆಯಿಂದ 50 ಕೋಟಿ ಬಿಡುಗಡೆ ಮಾಡಲಾಗಿದೆ. ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ತಲಾ 25ಲಕ್ಷ ಹಾಗೂ ಬರಪೀಡಿತ ವಲ್ಲದ ತಾಲ್ಲೂಕುಗಳಿಗೂ ಕುಡಿಯುವ ನೀರಿಗೆ 25 ಲಕ್ಷ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಬರಪೀಡಿತ ಕೆಲವು ಪ್ರದೇಶಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಕೊಪ್ಪಳ, ಕೋಲಾರ, ಬೆಳಗಾವಿಯಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಉಳಿದವುಗಳನ್ನು ಮುಂದಿನ ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಕೊರತೆ ಇರದಂತೆ ಕ್ರಮ ವಹಿಸಬೇಕು. ಬರ ನಿರ್ವಹಣೆಗೆ ಸಂಬಂಧಪಟ್ಟ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಹಣ ಇದೆ. ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.