ನವದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಖಾಸಗಿ ಶಾಲಾ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 35 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಗಾಯಗೊಂಡಿದ್ದ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜನ್ ಆಭಾರ್ ಕಾರ್ಯಕ್ರಮದಲ್ಲಿಯೇ ಘಟನೆ ಬಗ್ಗೆ ಉಲ್ಲೇಖಿಸಿ, ನಮ್ಮ ಕಾರ್ಯಕ್ರಮಕ್ಕೆ ಬರುತ್ತಿದ್ದ ಬಸ್ ಅಪಘಾತವಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ರಾಜ್ಯದ ಮುಖ್ಯಮಂತ್ರಿ ಗಾಯಾಳುಗಳಿಗೆ ಬೇಕಾದ ಎಲ್ಲ ನೆರವು ನೀಡುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲರೂ ತಡವಾದರೂ ಚಿಂತೆಯಿಲ್ಲ, ನಿಧಾನವಾಗಿ ವಾಹನ ಚಾಲನೆ ಮಾಡಿಕೊಂಡು ಹೋಗಿ ಎಂದು ಸಲಹೆ ನೀಡಿದರು.
ಧರ್ಮಶಾಲಾದಿಂದ 37 ಕಿ.ಮೀ. ದೂರದಲ್ಲಿರುವ ಕಾಂಗ್ರಾ ಜಿಲ್ಲೆಯ ಜವಾಲಿ ಬಳಿ ನಡೆದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೋದಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಜನ್ ಆಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ತೆರಳುತ್ತಿದ್ದರು.
pray for 35-students,pm modi,bus-accident