ಬೆಂಗಳೂರು, ಡಿ.29-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ 18 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ರೈತರಿಗೆ ಸಾಗುವಳಿ ಚೀಟಿಗಾಗಿ ಅರ್ಜಿ ಹಾಕಲು ಅವಕಾಶ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘ ಜ.3 ರಂದು ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಎನ್.ವೆಂಕಟಾಚಲಯ್ಯ,ಬೆಂಗಳೂರು ನಗರದ 18 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ವ್ಯವಸಾಯ ಮಾಡುತ್ತಿರುವ ಬಡ ರೈತರು ಸಾಗುವಳಿ ಚೀಟಿ ಪಡೆಯಲು ಫಾರಂ ನಂ.57ರಲ್ಲಿ ಅರ್ಜಿ ಹಾಕಿಕೊಳ್ಳಲು ಅವಕಾಶವಿದ್ದರೂ ಅಧಿಕಾರಿಗಳು ಅರ್ಜಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಈ ಹಿಂದೆ ಬಡ ರೈತರಿಗೆ ಸಾಗುವಳಿ ಚೀಟಿ ನೀಡಲು ಒತ್ತಾಯಿಸಿ 10 ಸಾವಿರಕ್ಕೂ ಹೆಚ್ಚು ರೈತರು ಸ್ವತಂತ್ರ ಉದ್ಯಾನವನದಲ್ಲಿ ಸತ್ಯಾಗ್ರಹ ನಡೆಸಿದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸಾಗುವಳಿ ಚೀಟಿ ನೀಡುವ ಭರವಸೆ ನೀಡಿದ್ದರು. ಆದರೆ ಅದು ಕೇವಲ ಮಾತಾಗಿಯೇ ಉಳಿದಿದೆ.ಈ ಬಗ್ಗೆ ಕ್ರಮವಹಿಸದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಬಡ ರೈತರಿಗೆ ಭೂಮಿ ನೀಡುವ ಬದಲಿಗೆ ಲ್ಯಾಂಡ್ ಡೆವಲಪರ್ಸ್, ಭೂಗಳ್ಳರು ಹಾಗೂ ಹಣ ಇರುವವರಿಗೆ ಭೂಮಿ ನೀಡುತ್ತಿರುವುದು ಸರಿಯಲ್ಲ. ಬೆಂಗಳೂರಿನ ಸುತ್ತಮುತ್ತ ಭೂಮಿಗೆ ಹೆಚ್ಚಿನ ಬೆಲೆ ಇರುವುದರಿಂದ ರೈತರು ಸಾಕಷ್ಟು ತೊಂದರೆಯಲ್ಲಿದ್ದಾರೆ.ಮನೆ ಬಾಡಿಗೆ ಕಟ್ಟಲಾಗದೆ ಜೀವನ ನಡೆಸುವ ಪರಿಸ್ಥಿತಿ ಅವರದಾಗಿದೆ.ಸರ್ಕಾರ ಇದರ ಬಗ್ಗೆ ಗಮನಹರಿಸಬೇಕೆಂದು ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದರು.
ಕಾರ್ಯದರ್ಶಿ ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ಹೊನ್ನರಾಜ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.