ಬೆಂಗಳೂರು,ಡಿ.30-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಅಧಿಕಾರ ಹಿಡಿಯಬೇಕೆಂಬ ಬಿಜೆಪಿಯ ಪ್ರಯತ್ನ ಫಲ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವುದಿಲ್ಲ. ಪಕ್ಷ ಬಿಡುವಷ್ಟು ಕೆಟ್ಟ ನಿರ್ಧಾರವನ್ನು ಅವರು ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವನ್ನು ಖರ್ಗೆ ವ್ಯಕ್ತಪಡಿಸಿದರು.
ಕಳೆದ 25 ವರ್ಷಗಳಿಂದಲೂ ರಮೇಶ್ ಕಾಂಗ್ರೆಸ್ನಲ್ಲಿ ಇದ್ದಾರೆ.ಪಕ್ಷವು ಅವರಿಗೆ ಸಾಕಷ್ಟು ಅವಕಾಶವನ್ನು ಕಲ್ಪಿಸಿದೆ ಎಂದರು.
ಹೈಕಮಾಂಡ್ ನಿರ್ಧಾರಕ್ಕೆ ಬದ್ಧ:
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಡುವೆ ಹೊಂದಾಣಿಕೆ ವಿಚಾರದ ಬಗ್ಗೆ ಇದುವರೆಗೂ ಯಾವುದೇ ಚರ್ಚೆಯಾಗಿಲ್ಲ. ಚುನಾವಣಾ ಪೂರ್ವ ಮೈತ್ರಿಯ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.
ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಒಂದು ವೇಳೆ ಚರ್ಚೆಯಾದಾಗ ನೋಡೋಣ ಎಂದರು.
ಕಾಂಗ್ರೆಸ್-ಜೆಡಿಎಸ್ ಜೊತೆಗೂಡಿ ಮೈತ್ರಿ ಸರ್ಕಾರವನ್ನು ರಾಜ್ಯದಲ್ಲಿ ನಡೆಸಲಾಗುತ್ತಿದೆ. ಜೆಡಿಎಸ್ ನಾಯಕರು ಲೋಕಸಭೆ ಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಕೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ನಿಲುವನ್ನು ತಿಳಿಸುವುದರಲ್ಲಿ ತಪ್ಪಿಲ್ಲ. ಆದರೆ ಉಭಯ ಪಕ್ಷಗಳ ನಾಯಕರ ನಡುವೆ ಚರ್ಚೆಯಾದ ಬಳಿಕ ಯಾರಿಗೆ ಎಷ್ಟು ಸ್ಥಾನಗಳು ಎಂಬುದು ಸ್ಪಷ್ಟವಾಗಲಿದೆ. ಪ್ರಜಾಪ್ರಭುತ್ವದ ಒಳಿತಿಗಾಗಿ ನಾವೆಲ್ಲರೂ ಒಂದಾಗಬೇಕಿದೆ ಎಂದರು.