ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನೂತನ ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.1- ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ, ಅಪರಾಧ ಚಟುವಟಿಕೆಗಳ ನಿಯಂತ್ರಣದ ಬಗ್ಗೆ ಇಂದು ನೂತನ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹ ಸಚಿವರು ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.

ರಾಜಧಾನಿ ಬೆಂಗಳೂರು ಸೇರಿದಂತೆ ಇತರೆಡೆ ನಡೆದ ವರ್ಷಾಚರಣೆ ಸಂದರ್ಭದಲ್ಲಿ ಯಾವುದೆ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಮರ್ಪಕವಾಗಿ ಕೆಲಸ ನಿರ್ವಹಿಸಿದ ಪೊಲೀಸರ ಕಾರ್ಯವೈಖರಿಯನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಕಾನೂನು ಸುವ್ಯವಸ್ಥೆ ಕಾಪಾಡಿ ಅಗತ್ಯ ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದರು.

ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ, ಕೋಮು ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ. ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಿ ಇಲಾಖೆಗೆ ಒಳ್ಳೆ ಹೆಸರು ತರಬೇಕೆಂದು ಅವರು ಹೇಳಿದರು.

ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ನೂತನ ಸಚಿವರಿಗೆ ಹೊಸ ವರ್ಷದ ಶುಭಾಶಯ ಕೋರಿದರು. ನಂತರ ಸಚಿವರು ತುಮಕೂರು ಸಿದ್ಧಗಂಗಾ ಮಠಕ್ಕೆ ತೆರಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ