ಹಣದ ಪ್ರಕರಣ ಸಂಬಂಧ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವರನ್ನು ತಡೆಹಿಡಿದ ಕಾಂಗ್ರೇಸ್ಸಿನ ಪ್ರಮುಖ ನಾಯಕರು

ಬೆಂಗಳೂರು, ಜ.6- ವಿಧಾನಸೌಧದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಸಿ.ಪುಟ್ಟರಂಗಶೆಟ್ಟಿ  ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಅದನ್ನು ಕಾಂಗ್ರೆಸ್‍ನ ಪ್ರಮುಖ ನಾಯಕರು ತಡೆಹಿಡಿದಿದ್ದಾರೆ ಎನ್ನಲಾಗಿದೆ.

ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಾಂಗ್ರೆಸ್‍ಗೆ ತೀವ್ರ ಮುಜುಗರವಾಗಿದ್ದು, ಸಮರ್ಥಿಸಿಕೊಳ್ಳಲು ಪರದಾಡುವಂತಾಗಿದೆ. ಹಾಗಾಗಿ ಕೆಲವು ನಾಯಕರ ಕಟು ಮಾತುಗಳಿಂದ ಬೇಸತ್ತ ಪುಟ್ಟರಂಗಶೆಟ್ಟಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನಲಾಗಿದೆ.
ಅದನ್ನು ತಡೆ ಹಿಡಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನಿರಲು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಯುತ್ತಿದೆ. ಮೊದಲು ವಿಚಾರಣೆ ನಡೆಯಲಿ. ಅದರ ವರದಿ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳೋಣ, ಸದ್ಯಕ್ಕೆ ಎಲ್ಲವೂ ಯಥಾಸ್ಥಿತಿಯಲ್ಲಿ ಮುಂದುವರೆಯಲಿ. ದುಡಿಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ. ರಾಜೀನಾಮೆಯಿಂದ ಎಲ್ಲವೂ ಪರಿಹಾರ ಆಗುವುದಿಲ್ಲ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಪುಟ್ಟರಂಗಶೆಟ್ಟಿ ಅವರು ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಸಚಿವರ ಕಚೇರಿಯ ಸಿಬ್ಬಂದಿ ಮೋಹನ್ ಎಂಬುವರು 25.76 ಲಕ್ಷ ಹಣವನ್ನು ವಿಧಾನಸೌಧದಿಂದ ಹೊರಗೆ ತೆಗೆದುಕೊಂಡು ಹೋಗುವಾಗ   ಸಿಕ್ಕಿಬಿದ್ದಿದ್ದರು. ಅದು ಪೆÇಲೀಸ್ ಠಾಣೆ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಲೇಬೇಕೆಂದು ಬಿಜೆಪಿ ಪಟ್ಟು ಹಿಡಿದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ.

ಕಾಂಗ್ರೆಸ್‍ನ ಕೆಲವು ನಾಯಕರು ಕೂಡ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ, ದಿನೇಶ್‍ಗುಂಡೂರಾವ್ ಸೇರಿದಂತೆ ಇತರೆ ಬಣದವರು ಪುಟ್ಟರಂಗಶೆಟ್ಟಿ ಅವರ ರಾಜೀನಾಮೆಯನ್ನು ತಳ್ಳಿ ಹಾಕಿದ್ದಾರೆ.
ಹೈಕಮಾಂಡ್ ಕೂಡ ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

ಪುಟ್ಟರಂಗಶೆಟ್ಟಿ ಆರಂಭದಿಂದಲೂ ತಾವು ಅಮಾಯಕರೆಂದು ವಾದಿಸುತ್ತಿದ್ದು, ದುರುದ್ದೇಶಪೂರ್ವಕವಾಗಿ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿರುವುದಾಗಿ ಆರೋಪಿಸುತ್ತಿದ್ದಾರೆ.

ಒಟ್ಟಾರೆ ಸತ್ಯಾಸತ್ಯತೆ ಏನೇ ಇದ್ದರೂ ಪುಟ್ಟರಂಗ ಶೆಟ್ಟಿ  ಅವರು ಮೊದಲು ರಾಜೀನಾಮೆ ನೀಡಬೇಕು. ತನಿಖೆ ಎದುರಿಸಿ ನಿರ್ದೋಷಿ ಎಂದು ಸಾಬೀತದರೆ ನಂತರ ಬೇಕಾದರೆ ಸಂಪುಟಕ್ಕೆ ಮರು ಸೇರ್ಪಡೆಗೊಳ್ಳಲಿ ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.
ಏನೇ ಆದರೂ ವಿಧಾನಸೌಧದಲ್ಲಿ ಸಿಕ್ಕ ಹಣದ ಪ್ರಕರಣ ಕಾಂಗ್ರೆಸ್ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ