ನವದೆಹಲಿ: ವಲಸಿಗರಿಗೆ ಭಾರತದ ಪೌರತ್ವ ನೀಡುವ ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆ 2019 ಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಪೌರತ್ವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮೂಲಕ 1955ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನಗಳಿಂದ ವಲಸೆ ಬಂದು ನೆಲೆಸಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ.
ಪೌರತ್ವ ತಿದ್ದುಪಡಿ ಮಸೂದೆಯನ್ನು 2016ರಲ್ಲಿ ಮಂಡಿಸಲಾಗಿತ್ತು. ಆದರೆ, ವಿರೋಧ ಪಕ್ಷಗಳ ಒತ್ತಾಯದ ಹಿನ್ನೆಲೆಯಲ್ಲಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಜೆಪಿಸಿ ಮಸೂದೆ ಕುರಿತು ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೇಂದ್ರ ಸಚಿವ ಸಂಪುಟ ಮಸೂದೆಗೆ ಒಪ್ಪಿಗೆ ಸೂಚಿಸಿತ್ತು.
ಪೌರತ್ವ ಮಸೂದೆಯನ್ನು ವಿರೋಧಿಸಿ ಅಸ್ಸಾಂ ಗಣ ಪರಿಷದ್ (ಎಜಿಪಿ) ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಸೋಮವಾರ ಹಿಂಪಡೆದಿತ್ತು. ಜತೆಗೆ ಎನ್ಡಿಎ ಮಿತ್ರ ಪಕ್ಷಗಳಾದ ಶಿವಸೇನೆ ಮತ್ತು ಜೆಡಿ(ಯು) ಮಸೂದೆಯನ್ನು ವಿರೋಧಿಸಿವೆ. ಮಿಜೋರಾಂ ಮತ್ತು ಮೇಘಾಲಯ ಸರ್ಕಾರಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿ ನಿರ್ಣಯವನ್ನು ಅಂಗೀಕರಿಸಿವೆ.
Citizenship (Amendment) Bill, introduced , Lok Sabha