ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧದ ಗಣಿಗಾರಿಕೆ ಲೈಸೆನ್ಸ್ ವಿವಾದ : ರಾಜ್ಯಸಭೆಯಲ್ಲಿ ಭಾರೀ ಗದ್ದಲ

ನವದೆಹಲಿ, ಜ.8- ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧದ ಗಣಿಗಾರಿಕೆ ಲೈಸೆನ್ಸ್ ವಿವಾದ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಗದ್ದಲಕ್ಕೆ ಕಾರಣವಾಯಿತು.

ಈ ವಿಷಯವನ್ನು ಮುಂದಿಟ್ಟುಕೊಂಡು ಸಮಾಜವಾದಿ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ಸಭಾಪತಿ ವೆಂಕಯ್ಯನಾಯ್ಡು ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಇಂದು ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಎಸ್‍ಪಿ ಸದಸ್ಯರು ಈ ವಿಷಯ ಪ್ರಸ್ತಾಪಿಸಿದರು. ರಾಜಕೀಯ ದ್ವೇಷದಿಂದ ನಮ್ಮ ಪಕ್ಷದ ಮುಖಂಡರ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಆರೋಪಿಸಿ ಧರಣಿ ನಡೆಸಿದರು.

ಎಸ್‍ಪಿ ಸದಸ್ಯರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಭಾಪತಿ ವೆಂಕಯ್ಯನಾಯ್ಡು ಯಾವುದೇ ಕಲಾಪ ನಡೆಸದೆ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಅಖಿಲೇಶ್ ಯಾದವ್ ಈ ಹಿಂದೆ ಗಣಿ ಸಚಿವರಾಗಿದ್ದಾಗ ಕೆಲವು ಸಂಸ್ಥೆಗಳಿಗೆ ಗಣಿಗಾರಿಕೆಗೆ ಅಕ್ರಮವಾಗಿ ಅನುಮತಿ ನೀಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಿಬಿಐ ಕ್ರಮಕ್ಕೆ ಮುಂದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ