
ಬೆಂಗಳೂರು: ತೆಂಗಿನ ನಾರಿನ ಉದ್ದಿಮೆ ಸ್ಥಾಪನೆಗೆ ರಾಜ್ಯದಲ್ಲಿ ವಿಪುಲ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಕನಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ತೆಂಗಿನ ನಾರು ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನ ಕುರಿತಂತೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ತೆಂಗು ಉತ್ಪಾದನೆಯಲ್ಲಿ ರಾಜ್ಯ ಶೇ. 29 ರಷ್ಟು ಉತ್ಪಾದನೆಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಆದರೆ ತೆಂಗಿನ ನಾರಿನ ಉತ್ಪನ್ನಗಳಲ್ಲಿ ರಾಜ್ಯದ ಪಾಲು ಶೇ. 10 ರಷ್ಟು ಮಾತ್ರ. ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ತೆಂಗಿನನಾರು ಹೇರಳವಾಗಿ ಲಭ್ಯವಿರುವುದರಿಂದ ತೆಂಗಿನ ನಾರಿನ ಉದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದರು.
ತೆಂಗಿನ ನಾರಿನ ಉತ್ಪನ್ನಗಳ ತಯಾರಿಕಾ ಘಟಕಗಳ ಸ್ಥಾಪನೆಗೆ ಪೂರಕ ವಾತಾವರಣ, ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮೊದಲಾದ ಅಂಶಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಸಣ್ಣ ಕೈಗಾರಿಕಾ ಸಚಿವ ಶ್ರೀನಿವಾಸ್, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತರರು ಹಾಜರಿದ್ದರು.