ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜ.9- ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ.

ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರ  ನಿರ್ವಹಣೆ ಕುರಿತಂತೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಬೆಳೆನಾಶ, ನೀರಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಜಿಲ್ಲಾಡಳಿತ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಮೇವುಬ್ಯಾಂಕ್ ಹಾಗೂ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿ ಟ್ಯಾಂಕರ್‍ಗಳ ಮೂಲಕ ಪೂರೈಸಲು ನಿರ್ದೇಶನ ನೀಡಿದ್ದಾರೆ. ಅಗತ್ಯವಿರುವ ಕಡೆಗಳಲ್ಲಿ ಬೋರ್‍ವೆಲ್‍ಗಳನ್ನು ಕೊರೆಯುವಂತೆ ಹಾಗೂ ಹಾನಿಗೀಡಾಗಿರುವ ಬೋರ್‍ವೆಲ್‍ಗಳನ್ನು ದುರಸ್ತಿಗೊಳಿಸಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಬಿಲ್‍ಗಳನ್ನು 15 ದಿನದೊಳಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್, ಬೆಂಗಳೂರು ಜಿಲ್ಲಾಧಿಕಾರಿ ಕರಿಗೌಡ, ಬೆಂ.ಗ್ರಾ.ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ