ಲಕ್ನೊ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದ 57 ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಯಿದೆ.
ಕಳೆದ 5 ವರ್ಷಗಳಲ್ಲಿ ರಾಜ್ಯದ ಬಹುತೇಕ ಬಿಜೆಪಿ ಸಂಸದರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲವಾಗಿದ್ದು, ಅವರಲ್ಲಿ 57 ಮಂದಿ ಸಂಸದರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವುದು ಅನುಮಾನವಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ರಾಜ್ಯದ ಬಿಜೆಪಿ ನಾಯಕರಿಗೆ ಮನದಟ್ಟು ಮಾಡಿ ಕೊಡಲಾಗಿದೆ. ಪಕ್ಷದ ಸಂಸದರ ಕುರಿತು ಆಂತರಿಕ ಸಮೀಕ್ಷೆಯನ್ನು ಅಮೆರಿಕಾ ಮೂಲದ ಖಾಸಗಿ ಸಂಸ್ಥೆ ನಡೆಸಿದ್ದು ಉತ್ತರ ಪ್ರದೇಶದ 8,135 ನಯಾ ಪಂಚಾಯತ್ ಗಳ 822 ಬ್ಲಾಕ್ ಗಳಲ್ಲಿ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಬಹುತೇಕ ಬಿಜೆಪಿ ಸಂಸದರು ಜನರಿಗೆ ಕೆಲಸ ಮಾಡಿಕೊಡುವಲ್ಲಿ ವಿಫಲವಾಗಿದ್ದು ಇದರಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಟಿಕೆಟ್ ಸಿಗುವುದು ಸಂಶಯವಾಗಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ರಾಜ್ಯದ 80 ಲೋಕಸಭೆ ಕ್ಷೇತ್ರಗಳಲ್ಲಿ ಕಳೆದ ಬಾರಿ 71 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಗೋರಖ್ ಪುರ ಮತ್ತು ಪುಲ್ಪುರ್ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಸೋಲನುಭವಿಸಿತ್ತು.
ರಾಜ್ಯದ 97 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿನ ಜನರನ್ನು ಸಮೀಕ್ಷೆಗೊಳಪಡಿಸಲಾಗಿದ್ದು, ಈ ವೇಳೆ ಅನೇಕ ಸಂಸದರು ಸ್ಥಳೀಯರ ಮತ್ತು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ.