ಮೈಸೂರು: ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗ್ರೀನ್ ಸಿಗ್ನಲ್ ನೀಡಿದ್ದು, ದೇವೇಗೌಡರು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ, ಇದರ ಬೆನ್ನಲ್ಲೆ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಸ್ಥಳೀಯ ಜೆಡಿಎಸ್ ನಾಯಕರು ಲಾಬಿ ನಡೆಸುತ್ತಿದ್ದಾರೆ.
ಮಂಡ್ಯದಿಂದ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಜಿಲ್ಲೆಯ ಜೆಡಿಎಸ್ ಮುಖಂಡರು ಒತ್ತಡ ಹಾಕುತ್ತಿದ್ದು, ಇದಕ್ಕೆ ಶಾಸಕರು ಕೂಡ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದು ಹೀಗಾಗಿ ದೇವೇಗೌಡರ ಕುಟುಂಬದಿಂದ ಮಂಡ್ಯಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಂಡ್ಯ ಜಿಲ್ಲೆಯ ಜೆಡಿಎಸ್ ಭದ್ರಕೋಟೆಯಾಗಿದ್ದು, ಹಾಲಿ ಲೋಕಸಭೆ ಕ್ಷೇತ್ರವೂ ಜೆಡಿಎಸ್ ವಶದಲ್ಲಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರೇ ಅಧಿಕಾರದಲ್ಲಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲೂ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.
ನಿಖಿಲ್‌ಕುಮಾರಸ್ವಾಮಿ ಮಂಡ್ಯ ಜಿಲ್ಲೆಗೆ ಹೊಸಬರೇನೂ ಅಲ್ಲ. ಏಳೆಂಟು ವರ್ಷಗಳಿಂದ ಜಿಲ್ಲೆಯೊಂದಿಗೆ ಸಂಪರ್ಕದಲ್ಲಿದ್ದು, ಇಲ್ಲಿನ ಜನರು ಮತ್ತು ಪಕ್ಷದ ಮುಖಂಡರೊಂದಿಗೆ ಒಡನಾಡ ಹೊಂದಿದ್ದಾರೆ. ಹೀಗಾಗಿ ಅವರನ್ನೇ ಅಭ್ಯರ್ಥಿಯಾಗಿ ಘೋಷಿಸಬೇಕೆಂದು ಸ್ಥಳೀಯ ಮುಖಂಡರ ಒತ್ತಾಯವಾಗಿದೆ.