
ಬೆಂಗಳೂರು, ಜ.17- ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದೆ.
ಈ ಸಂಬಂಧ ವಾಣಿಜ್ಯ ಮಂಡಳಿ ಅಧ್ಯಕ್ಷ ಎ.ಚಿನ್ನೇಗೌಡರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ದೇಶದಲ್ಲಿ ಮಠಗಳ ಮೂಲಕ ಮಠಾಧೀಶರು, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಗಾಧ ಸೇವೆ ಸಲ್ಲಿಸುತ್ತಿದ್ದಾರೆ.ಇಂತಹ ಮಹಾನುಭಾವರ ಪೈಕಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಅಗ್ರಗಣ್ಯರು.
ತ್ರಿವಿಧ ದಾಸೋಹಿಯಾಗಿರುವ ಶ್ರೀಗಳು, ಅಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ, ಊಟದ ವ್ಯವಸ್ಥೆ ಮಾಡಿದ್ದಾರೆ. ಶತಾಯುಷಿಗಳಾಗಿ ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀಗಳಿಗೆ ಅಸಂಖ್ಯಾತ ಭಕ್ತರಿದ್ದಾರೆ.ಇಂತಹ ಮಾನುಭಾವರ ಸೇವೆಯನ್ನು ಗುರುತಿಸಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಚಿತ್ರರಂಗವು ಆಶಿಸುತ್ತಿದೆ.
ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ವಿನಯಪೂರ್ವಕವಾಗಿ ಮನವಿ ಮಾಡುತ್ತೇವೆ ಎಂದು ಪ್ರಕಟಣೆಯಲ್ಲಿ ಚಿನ್ನೇಗೌಡರು ತಿಳಿಸಿದ್ದಾರೆ.