ಬೆಂಗಳೂರು,ಜ.18- ನಗರದ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಬೃಹತ್ ಯೋಜನೆಗಳ ಸಾಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷೆ ಲಾವಣ್ಯ ಗಣೇಶ್ ರೆಡ್ಡಿ ಇಂದಿಲ್ಲಿ ತಿಳಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ತಮ್ಮ ಕಚೇರಿ ಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಂಗಳೂರು ನಗರ ಶರವೇಗದಲ್ಲಿ ಬೆಳೆಯುತ್ತಿದೆ. ಹೀಗಾಗಿ ನಗರದ ಅಭಿವೃದ್ದಿಗೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಬೃಹತ್ ರಸ್ತೆ, ಮೇಲ್ಸೇತುವೆ, ಕೆಳಸೇತುವೆ, ನೀರುಗಾಲುವೆ ಸೇರಿದಂತೆ ಹಲವಾರು ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.
ಈಗಾಗಲೇ ಹಲವು ಅಭಿವೃದ್ಧಿ ಯೋಜನೆಗಳು ಶರವೇಗದಲ್ಲಿ ನಡೆಯುತ್ತಿದ್ದು, ನನ್ನ ಅವಧಿಯಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಹಕರಿಸುವುದಾಗಿ ಅವರು ಭರವಸೆ ನೀಡಿದರು.
ನನ್ನ ಮೇಲೆ ನಂಬಿಕೆ ಇಟ್ಟು ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಲಿಂಗರಾಜಪುರ ವಾರ್ಡ್ನ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಲಾವಣ್ಯ ಗಣೇಶ್ ರೆಡ್ಡಿ ಅವರಿಗೆ ಇದೇ ಸಂದರ್ಭದಲ್ಲಿ ಹಲವಾರು ಬಿಬಿಎಂಪಿ ಸದಸ್ಯರು ಮತ್ತಿತರ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದರು.