ಬೆಂಗಳೂರು,ಜ.18-ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ನಾಳೆ ಆಯೋಜಿಸಿರುವ ಸಾರ್ವಜನಿಕ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರುಗಳು ಪಾಲ್ಗೊಳ್ಳಲಿದ್ದಾರೆ.
ರ್ಯಾಲಿಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ತೆರಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಸಂಜೆ ಕೋಲ್ಕತ್ತಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಕುಮಾರಸ್ವಾಮಿ ಹಾಗೂ ದೇವೇಗೌಡರು ನಾಳೆ ಮಧ್ಯಾಹ್ನ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ತೃಣಮೂಲ ಕಾಂಗ್ರೆಸ್ ಆಯೋಜಿಸಿರುವ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ದೇವೇಗೌಡರು ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ದೆಹಲಿಗೆ ತೆರಳುವ ಕಾರ್ಯಕ್ರಮವಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರ್ಯಾಲಿ ಮುಗಿದ ನಂತರ ಮೈಸೂರಿಗೆ ನಾಳೆ ಸಂಜೆ ಮರಳಲಿದ್ದಾರೆ.
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸಿದ್ದರು.
ಮುಂಬರುವ ಲೋಕಸಭಾ ಚುನಾವಣೆಯನ್ನು ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಎದುರಿಸುವ ಉದ್ದೇಶ ಹೊಂದಿರುವ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ನ ರ್ಯಾಲಿಯಲ್ಲಿ ಜೆಡಿಎಸ್ ನಾಯಕರು ಭಾಗವಹಿಸುತ್ತಿದ್ದಾರೆ.