ಬಡವರಿಗೆ ಸುಲಭ ದರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಎಂ

ಬೆಂಗಳೂರು, ಜ.18-ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಸಂಜಯ್‍ಗಾಂಧಿ ಆಸ್ಪತ್ರೆ ಸೇರಿದಂತೆ ಸ್ವಾಯತ್ತ ಸಂಸ್ಥೆಗಳಿಗೆ ಹೆಚ್ಚಿನ ಶಕ್ತಿ ತುಂಬಲು ಮುಂದಿನ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟ್(ಅಸ್ಥಿಮಜ್ಜೆ) ಘಟಕದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾತನಾಡಿದ ಅವರು, ಬಡವರಿಗೆ ಸುಲಭ ದರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಹೆಚ್ಚಿನ ನೆರವನ್ನು ನೀಡಲಾಗುವುದು ಎಂದರು.

ಕಳೆದ 7 ತಿಂಗಳಲ್ಲಿ ಕಿದ್ವಾಯಿ ಆಸ್ಪತ್ರೆಗೆ ತಾವು ಮೂರನೇ ಬಾರಿ ಭೇಟಿ ನೀಡಿರುವುದಾಗಿ ಹೇಳಿದ ಮುಖ್ಯಮಂತ್ರಿಗಳು, ಕ್ಯಾನ್ಸರ್ ರೋಗಿಗಳಿಗೆ ದಾನಿಗಳು ದೊಡ್ಡ ಮಟ್ಟದಲ್ಲಿ ನೆರವು ನೀಡುತ್ತಿದ್ದಾರೆ.ಸಿಪಾನಿ ಕುಟುಂಬ ಮತ್ತೆ ಮೂರು ಅಂತಸ್ತಿನ ಹೆಚ್ಚುವರಿ ಕಟ್ಟಡ ನಿರ್ಮಿಸಲು ಮುಂದೆ ಬಂದಿದ್ದು, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸುವಂತೆ ಮನವಿ ಮಾಡಿದೆ ಎಂದರು.

ಕ್ಯಾನ್ಸರ್ ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಣದ ಕೊರತೆ ಉಂಟಾಗುತ್ತದೆ.ಕಿದ್ವಾಯಿ ಆಸ್ಪತ್ರೆಯಲ್ಲೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದ ಅವರು, 12 ಕೋಟಿ ರೂ. ವೆಚ್ಚದಲ್ಲಿ ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟೇಷನ್ ಘಟಕ ಸ್ಥಾಪನೆಗೆ ಇಂದು ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ 10-12 ತಿಂಗಳಲ್ಲಿ ಈ ಘಟಕದಿಂದ ಅತ್ಯಂತ ಕಡಿಮೆ ದರದಲ್ಲಿ ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟೇಷನ್ ಮಾಡಲಾಗುತ್ತದೆ. ಇದು ದೇಶದಲ್ಲೇ ದೊಡ್ಡ ಯೋಜನೆಯಾಗಿದೆ ಎಂದರು.

ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟೇಷನ್‍ಗೆ ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 30 ರಿಂದ 35 ಲಕ್ಷ ರೂ.ವೆಚ್ಚವಾಗುತ್ತಿದ್ದು, ಬಡವರಿಗೆ ದುಬಾರಿಯಾಗಿದೆ. ಇದನ್ನರಿತೆ ರಾಜ್ಯ ಸರ್ಕಾರ ಕಿದ್ವಾಯಿ ಆಸ್ಪತ್ರೆಯಲ್ಲಿ ಈ ಘಟಕ ಸ್ಥಾಪಿಸುತ್ತಿದೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ, ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ಸಿ.ರಾಮಚಂದ್ರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್, ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ