ಬೆಂಗಳೂರು, ಜ.18- ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕವಾಗಿರುವ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.
ಎಲ್ಲಾ ನಾಯಕರು ತಮ್ಮ ಭಿನ್ನಾಭಿಪ್ರಾಯ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಲೋಕಸಭೆಯ ಮಹಾಯುದ್ಧಕ್ಕೆ ತಾವು ಸಿದ್ಧರಾಗಿರುವ ಸಂದೇಶ ಸಾರಿದರು.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡುರಾವ್, ಕಾರ್ಯಾಧ್ಯಕ್ಷ ಈಶ್ವರ್ಖಂಡ್ರೆ, ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ, ರಾಜಶೇಖರ್ ಪಾಟೀಲ್, ಡಾ.ಜಯಮಾಲ ಮತ್ತಿತರರಿದ್ದರು.
ಕಾಂಗ್ರೆಸ್ ಪಕ್ಷದ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಸಂಸದೀಯ ಕಾರ್ಯದರ್ಶಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಬಹುತೇಕ ಮುಖಂಡರು ಒಟ್ಟಾಗಿ ಕಾಣಿಸಿಕೊಂಡರು.
ಪ್ರಚಾರ ಸಮಿತಿ ಹಿಂದಿನ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಎಚ್.ಕೆ.ಪಾಟೀಲ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್, ಪಕ್ಷದಲ್ಲಿ ನಿಷ್ಠೆ, ಪ್ರಮಾಣಿಕತೆ ಇದ್ದರೆ, ಯಾವುದೇ ಉನ್ನತ ಸ್ಥಾನ ತಲುಪಲು ಸಾಧ್ಯವಾಗುತ್ತದೆ.ನಿಷ್ಠಾವಂತ ಕಾರ್ಯಕರ್ತರನ್ನು ರಾಜಕೀಯವಾಗಿ ನಿಂದಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರದ ಆಸೆ ಇಲ್ಲದೆ ದಿನ ನಿತ್ಯ ದುಡಿಯುತ್ತಿರು ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆದ್ದು ರಾಹುಲ್ಗಾಂಧಿ ಅವರನ್ನು ಪ್ರಧಾನಿ ಮಾಡಬೇಕಿದೆ.ಕರ್ನಾಟಕದಲ್ಲಿ ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.