ಬೆಂಗಳೂರು,ಜ.22- ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲೇ ಸಮಾಜ ಕಲ್ಯಾಣ ಇಲಾಖೆ ಇಂದು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಶ್ರೀಗಳ ನಿಧನದಿಂದಾಗಿ ರಾಜ್ಯ ಸರ್ಕಾರವೇ ಮೂರು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ.ಶಿಷ್ಟಾಚಾರದ ಪ್ರಕಾರ ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಒಂದು ವೇಳೆ ಪೂರ್ವ ನಿಗದಿಯಂತೆ ಆಯೋಜಿಸಿದ್ದರೂ ಅದನ್ನು ರದ್ದು ಪಡಿಸಬೇಕಾಗುತ್ತದೆ.
ಅದರಲ್ಲೂ ನಡೆದಾಡುವ ದೇವರು ಎಂದೇ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ರದ್ದು ಮಾಡದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ಖುದ್ದು ಮುಖ್ಯಮಂತ್ರಿಯವರೇ ಮೂರು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿದ್ದರು.ಅಂದ ಮೇಲೆ ಸಮಾಜ ಕಲ್ಯಾಣ ಇಲಾಖೆ ಕೂಡ ಈ ಕಾರ್ಯಕ್ರಮವನ್ನು ರದ್ದು ಪಡಿಸಬೇಕಾಗಿತ್ತು. ಆದರೆ ಇಂದು ಬೆಳಗ್ಗೆ ಅಶೋಕ ಹೊಟೇಲ್ನಲ್ಲಿ ಶ್ರೀಗಳಿಗೆ ಒಂದು ನಿಮಿಷ ಮೌನ ಸಂತಾಪ ಸಲ್ಲಿಸಿ ಕಾರ್ಯಕ್ರಮವನ್ನು ಮುಂದುವರೆಸಲಾಯಿತು.
ಮಾಜಿ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಸಿಪಿಎಂ ನಾಯಕಿ ಬೃಂದಾ ಕಾರಟ್, ಶೇಷಾದ್ರಿಚಾರಿ, ಮೃದುಲಾ ಮುಖರ್ಜಿ, ರಾಘವ್ ಚಡ್ಡಾ, ತೇಜಸ್ವಿನಿ ಯಾದವ್, ಜಯಂತಿ ಚೌಧರಿ ಮತ್ತಿತರರು ಪಾಲ್ಗೊಂಡಿದ್ದರು.
ಸಮಾಜಕಲ್ಯಾಣ ಇಲಾಖೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ಅಶೋಕ ಹೊಟೇಲ್ಗೆ ನುಗ್ಗಿ ಪ್ರತಿಭಟಿಸಲು ಮುಂದಾದರು.ತಕ್ಷಣವೇ ಎಚ್ಚೆತ್ತ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು. ಆದರೆ ಸಾರ್ವಜನಿಕ ವಲಯದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆಯವರ ವರ್ತನೆಗೆ ಭಾರೀ ವಿರೋಧ ವ್ಯಕ್ತವಾಗಿದೆ.