ಅತ್ತ ಪೊಲೀಸರ ಹುಡುಕಾಟ, ಇತ್ತ ಜಾಮೀನಿಗೆ ಶಾಸಕ ಗಣೇಶ್ ಅರ್ಜಿ!

ರಾಮನಗರ: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಪೊಲೀಸರ ಹುಡುಕಾಟದ ನಡುವೆ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ.

ಜನವರಿ 19ರ ರಾತ್ರಿ ಈಗಲ್ ಟನ್ ರೆಸಾರ್ಟಿನಲ್ಲಿ ಕಂಪ್ಲಿ ಗಣೇಶ್ ಕುಡಿದು ಗಲಾಟೆ ನಡೆಸಿ ಶಾಸಕ ಆನಂದ್ ಸಿಂಗ್ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಪೊಲೀಸ್ ವಿಶೇಷ ತಂಡಗಳ ಹುಡುಕಾಟ ನಡೆಸುತ್ತಿವೆ.

ಪೊಲೀಸರ ಹುಡುಕಾಟದ ನಡುವೆ ಶಾಸಕ ಗಣೇಶ್ ಜಾಮೀನು ಕಸರತ್ತು ನಡೆಸಿದ್ದು, ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. ಇಂದು ರಾಮನಗರ ಜೆಎಮ್‍ಎಫ್‍ಸಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಶಾಸಕ ಗಣೇಶ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಶಾಸಕ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ