ಜ.29 ಮತ್ತು 30ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು, ಜ.24- ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಜ.29 ಮತ್ತು 30ರಂದು ನಗರದ ಅರಮನೆ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆ, ಪಕ್ಷದ ಸಂಘಟನೆ, ಪಕ್ಷದ ಮುಂದಿನ ಹೋರಾಟದ ರೂಪುರೇಷೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಜೆಡಿಎಸ್ ಪಕ್ಷದ ರ್ಯಾಲಿ ನಡೆಸಲು ಚಿಂತಿಸಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಅಲ್ಲದೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸುವ ಸಮಾರಂಭ ಆಯೋಜಿಸುವ ಬಗ್ಗೆಯೂ ಕೂಡ ಪಕ್ಷದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರಮಟ್ಟದ ಎಲ್ಲಾ ನಾಯಕರು, ವಿವಿಧ ರಾಜ್ಯಗಳ ಪಕ್ಷದ ಪದಾಧಿಕಾರಿಗಳು ಭಾಗವಹಿಸುವುದರಿಂದ ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಲೋಕಸಭೆ ಚುನಾವಣೆ ಪೂರ್ವ ಮೈತ್ರಿಯನ್ನು ಕಾಂಗ್ರೆಸ್‍ನೊಂದಿಗೆ ಮಾಡಿಕೊಳ್ಳುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ರಾಜ್ಯ ಹಾಗೂ ಇತರೆ ರಾಜ್ಯಗಳಲ್ಲೂ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ