ನವದೆಹಲಿ, ಜ.28- ಇತ್ತೀಚೆಗಷ್ಟೆ ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಶಿಕ್ಷಣ ಹಕ್ಕು ಕಾಯ್ದೆಯಡಿ ಇನ್ನು ಮುಂದೆ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ 12ನೆ ತರಗತಿವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಶೇ.25ರಷ್ಟು ಮೀಸಲಾತಿಯನ್ನು ಎಲ್ಲ ಶಾಲೆಗಳಲ್ಲಿ ಜಾರಿಗೆ ತರಲು ಮುಂದಾಗಿದೆ.
ಇದು ಮತದಾರರನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಅವರ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಎಂದೇ ವ್ಯಾಖ್ಯಾನಿಸಲಾಗಿದೆ.
ಒಂದು ವೇಳೆ ಈ ಕಾಯ್ದೆ ಜಾರಿಯಾದರೆ ದೇಶದಲ್ಲಿ ಕೋಟ್ಯಂತರ ಮಕ್ಕಳು 12ನೆ ತರಗತಿವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲಿದ್ದಾರೆ.
2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮುಂಬರುವ ಬಜೆಟ್‍ನಲ್ಲಿ ಸಂಸತ್‍ನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಕಾಯ್ದೆಗೆ ಒಪ್ಪಿಗೆ ಪಡೆಯಲು ತೀರ್ಮಾನಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಯ್ದೆಗೆ ತಿದ್ದುಪಡಿಯಾದರೆ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ 12ನೆ ತರಗತಿವರೆಗೆ ಉಚಿತ ಮತ್ತು ಕಡ್ಡಾಯವಾಗಿ ಶೇ.25ರಷ್ಟು ಮೀಸಲಾತಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ನೀಡಲೇಬೇಕಾಗುತ್ತದೆ. ಈಗಾಗಲೇ ಮಾನವ ಸಂಪನ್ಮೂಲ ಇಲಾಖೆಯು ಕಾಯ್ದೆಗೆ ತಿದ್ದುಪಡಿ ಮಾಡುವ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಿದೆ.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿದರೆ ಖಾಸಗಿ, ಅನುದಾನಿತ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕೆಂಬ ಕಾನೂನು ಈಗಾಗಲೇ ಜಾರಿಯಲ್ಲಿದೆ.
ಬರಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಮತ್ತು ನಗರ ಮತದಾರರನ್ನು ಸೆಳೆಯುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಜಾರಿಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ಮಾತ್ರ ಈ ಆರೋಪವನ್ನು ಒಪ್ಪುತ್ತಿಲ್ಲ.
2012ರಲ್ಲೇ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೇಂದ್ರ ಶಿಕ್ಷಣ ಸಲಹಾ ಮಂಡಳಿ ಶಿಫಾರಸಿನ ಮೇರೆಗೆ ಉಪಸಮಿತಿಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯ ಶಿಫಾರಸಿನಂತೆ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ 12ನೆ ತರಗತಿವರೆಗೂ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶೇ.25ರಷ್ಟು ಮೀಸಲಾತಿ ನೀಡಬೇಕೆಂದು ವರದಿ ನೀಡಿತ್ತು.
ಈ ವರದಿಯನ್ನು ನಾವು ಅನುಷ್ಠಾನ ಮಾಡಲು ಮುಂದಾಗಿದ್ದೇವೆ. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಇಲ್ಲವೆ ಚುನಾವಣಾ ಲಾಭ-ನಷ್ಟದ ಗಮನವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಇತ್ತೀಚೆಗಷ್ಟೆ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿಯನ್ನು ನೀಡಲು ಹೊಸ ಕಾಯ್ದೆಯನ್ನು ಜಾರಿ ಮಾಡಿತ್ತು. ಕೇಂದ್ರದ ಈ ಮಸೂದೆಯನ್ನು ಸಂಸತ್‍ನ ಎರಡೂ ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ರಾಷ್ಟ್ರಪತಿಗಳ ಅಂಕಿತವನ್ನೂ ಪಡೆಯಲಾಗಿದೆ.
ಫೆ.1ರಿಂದ ದೇಶದಾದ್ಯಂತ ನೂತನ ಕಾಯ್ದೆ ಜಾರಿಯಾಗಲಿದೆ. ಈಗಾಗಲೇ ಹಲವು ರಾಜ್ಯಗಳು ಇದನ್ನು ಅನುಷ್ಠಾನ ಮಾಡಿವೆ.