ಬೆಂಗಳೂರು, ಜ.28- ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾನಿಲಯಗಳಿಗೆ ಶಿಕ್ಷಣ ನೀಡುವ ಜತೆಗೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಬೆಂಗಳೂರು ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೂರನೆ ವಾರ್ಷಿಕ ಐಸಿಬಿಇ ಅಂತಾರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ನೀಡುವ ಶಿಕ್ಷಣದ ಸಂಬಂಧಿತ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ಆ ಮೂಲಕ ಉದ್ಯೋಗಾವಕಾಶಗಳನ್ನು ನೀಡಬೇಕಿದೆ.ಕಾಲೇಜುಗಳ ಕ್ಯಾಂಪಸ್‍ನಲ್ಲೇ ಉದ್ಯೋಗ ದೊರೆಯುವಂತಾಗಬೇಕು ಎಂಬ ಆಶಯದೊಂದಿಗೆ ಕೌಶಲ್ಯಾಭಿವೃದ್ಧಿಗೂ ಒತ್ತು ನೀಡಲಾಗಿದೆ ಎಂದರು.
ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲೇ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು.ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ಗ್ರಾಮೀಣಾಭಿವೃದ್ಧಿಗೆ ಅಗತ್ಯವಿರುವ ಶಿಕ್ಷಣದ ಬಗೆಗೆ ಜಾಗೃತಿ ಮೂಡಿಸಬೇಕು.ಪ್ರತಿ ವಿಶ್ವವಿದ್ಯಾನಿಲಯ ಕನಿಷ್ಟ ಐದು ಗ್ರಾಮಗಳನ್ನು ದತ್ತು ಪಡೆಯಬೇಕು ಎಂದು ಹೇಳಿದರು.
ಮಲೇಷಿಯಾ ಯೂನಿವರ್ಸಿಟಿಯ ವಿಸಿ ಅಮಿಯಾ ಬೌಮಿಕ್ ಮಾತನಾಡಿ, ಚೀನಾ ಹಾಗೂ ಯೂರೋಪ್ ಅಭಿವೃದ್ಧಿಯ ನಾಗಾಲೋಟದಲ್ಲಿ ಸಾಗುತ್ತಿವೆ. ಪಾರಂಪರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಭಾರತವು ಶೈಕ್ಷಣಿಕ ಅಭಿವೃದ್ಧಿ ಸಾಧಿಸುತ್ತಿದೆ ಎಂದರು.
ವೇತನ ಹೆಚ್ಚಳಕ್ಕೆ ಶಿಫಾರಸು: ಅತಿಥಿ ಉಪನ್ಯಾಸಕರಿಗೆ ಮಾಸಿಕ 5 ಸಾವಿರ ವೇತನ ಹೆಚ್ಚು ಮಾಡಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.