ಬೆಂಗಳೂರು, ಜ.28-ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಾಗೂ ಐತಿಹಾಸಿಕ ಸಮ್ಮೇಳನ ನಡೆಸಲು ಜೆಡಿಎಸ್ ಸಿದ್ಧತೆ ನಡೆಸಿದೆ.
ನಾಳೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಾಗೂ ಜ.30 ರಂದು ನಗರದ ಅರಮನೆ ಮೈದಾನದಲ್ಲಿ ಐತಿಹಾಸಿಕ ಸಮ್ಮೇಳನ ನಡೆಸಲಾಗುವುದು.
ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ಸಮ್ಮೇಳನದಲ್ಲಿ ಪ್ರಮುಖ ಹಾಗೂ ಜನಪರವಾದ ನಿರ್ಣಯಗಳನ್ನು ಜೆಡಿಎಸ್ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ರಾಜ್ಯದ ಎಲ್ಲಾ ಪದಾಧಿಕಾರಿಗಳಲ್ಲದೆ, ಇತರ ರಾಜ್ಯಗಳ ಹಾಗೂ ರಾಷ್ಟ್ರಮಟ್ಟದ ಪದಾಧಿಕಾರಿಗಳು ಕೂಡ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ಸಮ್ಮೇಳನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.ಅಲ್ಲದೆ, ಲೋಕಸಭೆ ಚುನಾವಣಾ ಪೂರ್ವ ಹೊಂದಾಣಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ.ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದು, ಎನ್ಡಿಎಯೇತರ ಪಕ್ಷಗಳ ಜೊತೆ ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದೇ ಸಂದರ್ಭದಲ್ಲಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಗುತ್ತದೆ.