ಫೆ.1ರಂದು ಕೇಂದ್ರದ ಬಜೆಟ್‍ಗೆ ಪ್ರತಿಯಾಗಿ ಆಂಧ್ರದಲ್ಲಿ ಕರಾಳ ದಿನ ಆಚರಣೆ: ಸಿಎಂ ಚಂದ್ರಬಾಬು ನಾಯ್ಡು

ಹೈದರಾಬಾದ್,ಜ.30- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಲಿರುವ ಬಜೆಟ್‍ಗೆ ಪ್ರತಿಯಾಗಿ ರಾಜ್ಯದಲ್ಲಿ ಪ್ರತಿಭಟನೆ ಮತ್ತು ಕರಾಳ ದಿನ ಆಚರಿಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಪ್ರತಿದಿನ ಟೆಲಿ ಕಾನ್ಫರೆನ್ಸ್ ಮೂಲಕ ತೆಲುಗು ದೇಶಂ(ಟಿಡಿಪಿ) ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ನಾಯ್ಡು ಈ ಹೇಳಿಕೆ ನೀಡಿದ್ದಾರೆ.

ದೆಹಲಿಯ ಪಾರ್ಲಿಮೆಂಟ್‍ನಲ್ಲಿ ಕೇಂದ್ರದ ಬಜೆಟ್ ಮಂಡನೆಯಾದರೆ ನಾವು ಆಂಧ್ರಪ್ರದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕರಾಳ ದಿನ ಮತ್ತು ಪ್ರತಿಭಟನೆ ನಡೆಸುತ್ತೇವೆ. ಇದಕ್ಕೆ ವಿರೋಧ ಪಕ್ಷಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ಪ್ರತಿ ಹಂತದಲ್ಲೂ ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ವಿಶೇಷ ಪ್ಯಾಕೇಜ್ ನೀಡಬೇಕೆಂದು ಹಲವು ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಿಲ್ಲ. ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಟಿಡಿಪಿ ಪರಮೋಚ್ಛ ನಾಯಕರಾದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ