ಬಿಸಿಎಎಸ್‍ಗೆ ಅಸ್ತಾನಾ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

ನವದೆಹಲಿ, ಜ.31- ಕೇಂದ್ರೀಯ ತನಿಖಾ ದಳ (ಸಿಬಿಐ) ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಅವರನ್ನು ನಾಗರಿಕ ವಿಮಾನಯಾನ ಭದ್ರತಾ ಮಂಡಳಿ (ಬಿಸಿಎಎಸ್) ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಬಿಸಿಎಎಸ್‍ಗೆ ಅಸ್ತಾನಾ ಅವರನ್ನು ಡಿಜಿ ಆಗಿ ನೇಮಕ ಮಾಡಿದ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲ ಎಂ.ಎಲ್.ಶರ್ಮ ಪಿಐಎಲ್ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಲು ನಿರಾಕರಿಸಿತು.

ಲಂಚ ಮತ್ತು ಭ್ರಷ್ಟಾಚಾರ ಆರೋಪಗಳಿಗಾಗಿ ಆಸ್ತಾನ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಜನವರಿ 11ರಂದು ನಿರಾಕರಿಸಿ, ತನಿಖೆ ಪೂರ್ಣಗೊಳಿಸಲು 10 ವಾರಗಳ ಗಡುವು ನೀಡಿತ್ತು.

ಈ ಮಧ್ಯೆ ಕೇಂದ್ರ ಸರ್ಕಾರ ಜ.18ರಂದು ಅವರನ್ನು ಬಿಸಿಎಎಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಿತ್ತು. ಇದನ್ನು ಪ್ರಶ್ನಿಸಿ ಶರ್ಮ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ