ಬೆಂಗಳೂರು, ಫೆ.3- ಬೇಸಿಗೆಯ ಆರಂಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ.
ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ ಕುರಿತು ಸೂಚನೆ ನೀಡಿದ್ದು , ರೋಗ ಲಕ್ಷಣಗಳು ಕಂಡು ಬಂದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸೊಳ್ಳೆ ನಿರೋಧಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.
ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿಯಲ್ಲಿ ಕಳೆದ ಒಂದು ವಾರದಲ್ಲೇ ಸುಮಾರು 40ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು , ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮತ್ತು ರಕ್ತ ಪರೀಕ್ಷೆಯ ನಂತರವೂ ಕೆಲವರಿಗೆ ಡೆಂಘೀ ರೋಗದ ಮಾದರಿಯಲ್ಲಿ ಜ್ವರ ಕಾಣಿಸಿಕೊಂಡಿದ್ದು , ಅವರಿಗೂ ತುರ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ಬಿಬಿಎಂಪಿ ವತಿಯಿಂದ ಕೆಲವು ಕೊಳಚೆ ಪ್ರದೇಶಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಫಾಗಿಂಗ್ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ.ಮತ್ತು ಎಲ್ಲಾ ಬಿಬಿಎಂಪಿ ಆಸ್ಪತ್ರೆಗಳ ಸಿಬ್ಬಂದಿಗಳು ಮತ್ತು ವೈದ್ಯರು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.