ಬೆಂಗಳೂರು,ಫೆ.4- ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಯ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ.
ನಾಳೆ ಮಧ್ಯಾಹ್ನ 3.30ಕ್ಕೆ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ಕರೆದಿರುವುದು ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.
ಸಭೆಗೆ ಯಾವುದೇ ಶಾಸಕರು ತಪ್ಪದೇ ಹಾಜರಾಗಬೇಕೆಂದು ಖುದ್ದು ಯಡಿಯೂರಪ್ಪನವರೇ ಶಾಸಕರಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.
ಮೇಲ್ನೋಟಕ್ಕೆ ಶಾಸಕಾಂಗ ಸಭೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಬಿಜೆಪಿ ನಾಯಕರು ಹೇಳುತಿರುದ್ದರಾದರೂ ದೀಢರನೆ ಶಾಸಕಾಂಗ ಸಭೆ ಕರೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬುಧವಾರದಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಂದು ರಾಜ್ಯಪಾಲ ವಿ.ಆರ್.ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವರು. ನಂತರ ಶುಕ್ರವಾರ ಹಣಕಾಸು ಖಾತೆ ಹೊಂದಿರುವ ಸಿಎಂ ಕುಮಾರಸ್ವಾಮಿ ಈ ವರ್ಷದ ಬಜೆಟ್ ಮಂಡನೆ ಮಾಡಲಿದ್ದಾರೆ.
ಕಾಂಗ್ರೆಸ್ನಲ್ಲಿ ಅತೃಪ್ತಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಸರಿದಿರುವ ಭಿನ್ನಮತೀಯ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ.
ಬಜೆಟ್ ಮಂಡನೆಗೂ ಮುನ್ನವೇ ಸರ್ಕಾರವನ್ನು ಹೇಗಾದರೂ ಮಾಡಿ ಅಸ್ಥಿರಗೊಳಿಸಲು ಬಿಜೆಪಿ ಶತಪ್ರಯತ್ನ ನಡೆಸಿದೆ.ಕಾಂಗ್ರೆಸ್ನಲ್ಲಿ ಭಿನ್ನಮತಿಯರೆನಿಸಿರುವ ಕೆಲವು ಅತೃಪ್ತ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು, ಸರ್ಕಾರ ಅಸ್ಥಿರಗೊಂಡರೆ ಇಲ್ಲವೇ ಬಿದ್ದು ಹೋದರೆ ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇವೆ ಎಂದು ವಾಗ್ದಾನ ಮಾಡಿದ್ದಾರೆ.
ಹೀಗಾಗಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಶಾಸಕಾಂಗ ಸಭೆ ಕರೆದಿದ್ದಾರೆ. ಬಜೆಟ್ ಮಂಡನೆ ಇಲ್ಲವೆ ಹಣಕಾಸು ಮಸೂದೆ ಮಂಡನೆಯಾಗುವ ಮುನ್ನ ಶಾಸಕರಿಂದ ರಾಜೀನಾಮೆ ಕೊಡಿಸಿದರೆ ಸಹಜವಾಗಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಸರ್ಕಾರಕ್ಕಿರುವ ಬೆಂಬಲ ಸಂಖ್ಯೆಯನ್ನು ಗಣನೀಯ ಪ್ರಮಾಣದಲ್ಲಿ ಇಳಿಕೆ ಮಾಡಿ ನಂತರ ಅವಿಶ್ವಾಸ ನಿರ್ಣಯ ಮಂಡಿಸುವ ಲೆಕ್ಕಾಚಾರ ಬಿಜೆಪಿಯಲ್ಲಿದೆ.
ವಿಧಾನಸಭೆ ಸ್ಪೀಕರ್ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ಹಿಂದೇಟು ಹಾಕಿದರೆ ರಾಜ್ಯಪಾಲರ ಬಳಿ ಭಿನ್ನಮತೀಯರು ಪರೇಡ್ ನಡೆಸುವುದಕ್ಕೂ ಸಿದ್ದರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಹೀಗಾಗಿ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಶಾಸಕರಿಂದ ಅಭಿಪ್ರಾಯ ಪಡೆಯಲು ಶಾಸಕಾಂಗ ಸಭೆಯನ್ನು ಕರೆಯಲಾಗಿದೆ.
ಸಂಜೆ ಕೋರ್ ಕಮಿಟಿ:
ಇನ್ನೊಂದೆಡೆ ಸಂಜೆ 5 ಗಂಟೆಗೆ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಕುರಿತಂತೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್ಲಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.
ಸಭೆಗೆ ಕೋರ್ ಕಮಿಟಿ ಸದಸ್ಯರಾದ ಸದಾನಂದಗೌಡ, ಈಶ್ವರಪ್ಪ, ಆರ್.ಅಶೋಕ್, ಜಗದೀಶ್ ಶೆಟ್ಟರ್, ನಳೀನ್ಕುಮಾರ್ ಕಟೀಲ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.
ಇದೇ 10ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ನಂತರ ರಾಜ್ಯದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಬೃಹತ್ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಬಿಜೆಪಿ ಶಕ್ತಿ ಪ್ರದರ್ಶಿಸಲು ಮುಂದಾಗಿದೆ.