ಬೆಂಗಳೂರು, ಫೆ.7- ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿದಿರುವ ವಿರೋಧ ಪಕ್ಷ ಬಿಜೆಪಿ ಇಂದು ನಡೆದ ವಿಧಾನಸಭಾ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳದೆ ಬಹಿಷ್ಕರಿಸಿತು.
ವಿಧಾನಸಭಾಧ್ಯಕ್ಷರಾದ ರಮೇಶ್ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಬಿಜೆಪಿ ಪಾಲ್ಗೊಂಡಿರಲಿಲ್ಲ.
ಅಧಿವೇಶನಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಸಭಾಧ್ಯಕ್ಷರು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆ ನಡೆಸಿದ್ದರು.
ನಿನ್ನೆ ರಾಜ್ಯ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಭಾಷಣ ಮಾಡುವ ಸಂದರ್ಭದಲ್ಲಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಬಿಜೆಪಿ ಧರಣಿ ನಡೆಸಿತ್ತು.
ಇಂದು ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ ಭಾಗವಹಿಸಿದ್ದರು.