ಬೆಂಗಳೂರು, ಫೆ.8- ಶಾಸಕಾಂಗ ಸಭೆಗೆ ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಶಾಸಕಾಂಗ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚಿನ್ಹೆಯಲ್ಲಿ ಆಯ್ಕೆಯಾಗಿರುವ ಶಾಸಕರು ಪಕ್ಷದ ಶಿಸ್ತನ್ನು ಪಾಲಿಸಬೇಕು.ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು, ಒಂದು ವೇಳೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ವಿಫಲ ಪ್ರಯತ್ನ ನಡೆಸುತ್ತಲೇ ಇದೆ.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕಾಂಗ್ರೆಸ್‍ನ ಅತೃಪ್ತ ಶಾಸಕರ ಜತೆ ಮುಂಬೈನಲ್ಲಿ ಇರುವುದು ಏಕೆ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷವಾಗಿ ಕೆಲಸ ಮಾಡುವುದು ಬಿಟ್ಟು ಅನಗತ್ಯವಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಏಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.