ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಮೂಲಗಳ ಪ್ರಕಾರ ಮುಂಬೈನಲ್ಲಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್ ಹಾಗೂ ಬಸನಗೌಡ ಪಾಟೀಲ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಯಚೂರು ಕಾಂಗ್ರೆಸ್ ಶಾಸಕ ಬಸನಗೌಡ ದಡ್ಡಲ್ ಅವರು, ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇವೆ. ನಾವು ಎಲ್ಲಿಗೂ ಹೋಗಿರಲಿಲ್ಲ. ಪಕ್ಷದ ಆಹ್ವಾನದ ಮೇರೆಗೆ ಇದೀಗ ಶಾಸಕಾಂಗ ಸಭೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್ ಅವರೂ ಕೂಡ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಸುಧಾಕರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ಮತ್ತು ಅಧಿವೇಶನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಸುಧಾಕರ್ ಆಗಮಿಸಿದ್ದಾರೆ ಎನ್ನಲಾಗುತ್ತಿದೆ