ಉ.ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆಯಿಂದ ವಿಧಾನಸೌಧ ಚಲೋ

ಬೆಂಗಳೂರು, ಫೆ.9-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.12 ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿರುವುದಾಗಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಮುಖಂಡರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಎ.ರವೀಂದ್ರನಾಯ್ಕ ಮಾತನಾಡಿ, ಅರಣ್ಯ ಹಕ್ಕು ಕಾಯ್ದೆಯಲ್ಲಿ ತಿರಸ್ಕರಿಸಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸಿ ಅರಣ್ಯ ವಾಸಿಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.

ಅರಣ್ಯ ಹಕ್ಕು ಕಾಯ್ದೆ ಕಲಂ 64 ಎ ಅಡಿಯಲ್ಲಿ ಒಕ್ಕಲೆಬ್ಬಿಸುವ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಅರಣ್ಯಾಧಿಕಾರಿಗಳಿಗೆ ಆದೇಶಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನಸೌಧ ಚಲೋ ವೇಲೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಹೇಳಿದರು.

ಒಂದು ವೇಳೆ ಸರ್ಕಾರ ಸ್ಪಂದಿಸದೆ ಹೋದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

ಅಂದು ಬೆಳಗ್ಗೆ 10.30ಕ್ಕೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ನಂತರ ಸರ್ಕಾರಿ ನೌಕರರ ಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ವಾಸಿಗಳ ಸಭೆ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯ ಶಾಸಕರು, ಸಂಬಂಧಪಟ್ಟ ಸಚಿವರು ಹಾಗೂ ತಜ್ಞರೊಂದಿಗೆ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ