ಬಿಜೆಪಿ ಆಪರೇಷನ್ ಕಮಲದಂತಹ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ: ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಫೆ.11- ಕರ್ನಾಟಕ ರಾಜಕಾರಣದಲ್ಲಿ ಭಾರೀ ವಿವಾದ ಮತ್ತು ಕೋಲಾಹಲಕ್ಕೆ ಕಾರಣವಾಗಿರುವ ಆಪರೇಷನ್ ಕಮಲ ಮತ್ತು ಆಡಿಯೋ ಪ್ರಕರಣ ಲೋಕಸಭೆಯಲ್ಲಿ ಇಂದು ಪ್ರತಿಧ್ವನಿಸಿ ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ನಡುವೆ ವಾದ-ವಾಗ್ವಾದಕ್ಕೆ ಕಾರಣವಾಯಿತು.

ಶೂನ್ಯವೇಳೆಯಲ್ಲಿ ಇಂದು ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ಶಾಸಕರನ್ನು ಖರೀದಿಸಲು ಬಿಜೆಪಿ ಮುಖಂಡರು ನಡೆಸಿದ ಯತ್ನದ ಆಡಿಯೋ ಬಹಿರಂಗಗೊಂಡಿದೆ. ಇದು ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಕುತಂತ್ರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಕೇಂದ್ರದ ವರಿಷ್ಠರ ಸೂಚನೆ ಮೇರೆಗೆ ರಾಜ್ಯದಲ್ಲಿ ಕುದುರೆ ವ್ಯಾಪಾರ ಮತ್ತು ಆಪರೇಷನ್ ಕಮಲದಂತಹ ಕೀಳುಮಟ್ಟ ರಾಜಕೀಯಕ್ಕೆ ಬಿಜೆಪಿ ಇಳಿದಿದೆ ಎಂದು ಖರ್ಗೆ ಆಪಾದಿಸಿದರು.

ಇದಕ್ಕೆ ದನಿಗೂಡಿಸಿದ ಮಾಜಿಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅಂಕಿ-ಅಂಶಗಳ ಸಚಿವ ಡಿ.ವಿ.ಸದಾನಂದಗೌಡ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಎರಡು ಪಕ್ಷಗಳ ನಡುವಣ ಭಿನ್ನಾಭಿಪ್ರಾಯದಿಂದ ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ. ಇದಕ್ಕೆ ಬಿಜೆಪಿ ಕಾರಣವಲ್ಲ ಎಂದು ಹೇಳಿದಾಗ ವಾದ-ವಾಗ್ವಾದಕ್ಕೆ ಕಾರಣವಾಯಿತು.

ಲೋಕಸಭಾಧ್ಯಕ್ಷೆ ಸುಮಿತ್ರ ಮಹಾಜನ್ ಪರಿಸ್ಥಿತಿ ತಿಳಿಗೊಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ