ಬೆಂಗಳೂರು, ಫೆ.13- ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿಭಜನೆ ಮಾಡಲು ಹೊರಟಿರುವ ಸರ್ಕಾರದ ಕ್ರಮವನ್ನು ಮೇಲ್ಮನೆಯಲ್ಲಿ ಪಕ್ಷಾತೀತವಾಗಿ ವಿರೋಧಿಸಲಾಯಿತು.
ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಮಹಂತೇಶ್ ಕವಟಗಿ ಮಠ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯನ್ನು ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಸ್ಥಾಪಿಸಲಾಗಿದೆ.
ಪ್ರಾದೇಶಿಕ ಕೇಂದ್ರಗಳನ್ನು ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ ಹಾಗೂ ಮುದ್ದೇನಹಳ್ಳಿಯಲ್ಲಿ ಸ್ಥಾಪಿಸಲಾಗಿದೆ.ಇಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಮತ್ತು ಪಿಎಚ್ಡಿ ಕೋರ್ಸ್ ನಡೆಸಲಾಗುತ್ತಿದೆ.ಆಯಾ ಭಾಗದ ತಾಂತ್ರಿಕ ಕಾಲೇಜು ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸುವ ಹಿನ್ನೆಲೆಯಲ್ಲಿ ಈ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
ಕೇಂದ್ರ ಸರ್ಕಾರ ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ಕೊಡುವ ಉದ್ದೇಶದಿಂದ ಹಾಗೂ ನಮ್ಮ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಸ್ಪರ್ಧಿಯಾಗಿ ನಿಲ್ಲುವ ಸಂದರ್ಭದಲ್ಲಿ ವಿಟಿಯು ವಿಭಜನೆ ಮಾಡಲು ಹೊರಟಿರುವುದು ಅಸಮಂಜಸವಾಗಿರುತ್ತದೆ ಎಂದು ಆರೋಪಿಸಿದರು.
ಇದು ಗಂಭೀರ ಪರಿಣಾಮ ಬೀರಲಿದೆ. ಬೆಳಗಾವಿ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ ಎಂದರು.
ಇದನ್ನು ಬೆಂಬಲಿಸಿ ಮಾತನಾಡಿದ ಆಡಳಿತ ಪಕ್ಷದ ಸದಸ್ಯ ಎಸ್.ಆರ್.ಪಾಟೀಲ್ ಅವರು ವಿಟಿಯು ವಿಭಜನೆಯಿಂದ ಉತ್ತರ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗಲಿದೆ. ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದರು.