ಹಾಸನದಲ್ಲಿ ಕಾಂಗ್ರೆಸ್ ಬೆಂಬಲ ಬೇಕಿಲ್ಲ: ಸಿಎಂ ಕುಮಾರಸ್ವಾಮಿ

ಹಾಸನ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿದರೆ ಬೆಂಬಲ ನೀಡಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ನಾನು ತಲೆಕೆಡಿಸಿಕೊಂಡಿಲ್ಲ. ಈ ಬಗ್ಗೆ ಜಿಲ್ಲೆಯ ಜನರೇ ತೀರ್ಮಾನ ಮಾಡುತ್ತಾರೆ. ನಮಗೇನು ಕಾಂಗ್ರೆಸ್ ಬೆಂಬಲ ಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಯಾರಿಗೆ ಯಾರು ಕಲ್ಲು ಹೊಡೀತಾರೋ ನೋಡೋಣ, ಸರ್ಕಾರ ಅಸ್ಥಿರಗೊಳಿಸುವ ಯತ್ನಕ್ಕೆ ತಡೆ ಬಿದ್ದಿದೆ, ಕೆಲವರು ಕೋರ್ಟ್ ನಲ್ಲಿ ತಡೆಯಾಜ್ಞೆ ತಂದಿದ್ದಾರೆ,ನಾನು ರಾಜ್ಯದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದೇನೆ ಹೊರತು ಬೇರೆ ವಿಷಯಗಳಿಗಲ್ಲ ಎಂದು ತಿಳಿಸಿದರು.

ಕೊಪ್ಪಳದಲ್ಲಿ ಟಾಯ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಿಂದ ಹತ್ತು ಸಾವಿರ ಯುವಕರಿಗೆ ಉದ್ಯೋಗ ನೀಡಿಕೆಗೆ ಈಗಾಗಲೇ ಚಾಲನೆ ನೀಡಲಾಗಿದೆ, ಚಿತ್ರದುರ್ಗದಲ್ಲಿ ಎಲ್ ಇಡಿ ಬಲ್ಬ್ ತಯಾರಿಸುವ ಕಂಪನಿ ತೆರೆಯಲಾಗಿದೆ, ಯುವಕರಿಗೆ ಒಂದು ಜಿಲ್ಲೆಯಲ್ಲಿ ತಲಾ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಚಿಂತನೆ ನಮ್ಮ ಗುರಿ ಎಂದರು.

ಇದೇ ವೇಳೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಮಾಹಿತಿ ನೀಡಿದ ಸಿಎಂ, ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ, ಕಾಂಗ್ರೆಸ್ ಪಕ್ಷ ದೊಡ್ಡ ಪಕ್ಷವಾಗಿದೆ ಇನ್ನೂ ಚರ್ಚೆ ಮಾಡಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ