ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಎಂ. ಕುಮಾರಸ್ವಾಮಿ

ಬೆಂಗಳೂರು, ಫೆ.21-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿ ಮಾಡಿ ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ, ಕಾಂಗ್ರೆಸ್‍ನೊಂದಿಗಿನ ಹೊಂದಾಣಿಕೆ ಹಾಗೂ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಪದ್ಮನಾಭನಗರದ ಅವರ ನಿವಾಸದಲ್ಲಿ ಗೌಡರನ್ನು ಭೇಟಿಯಾದ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆ ಪೂರ್ವ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್‍ನೊಂದಿಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಬೇಕೆಂಬ ಬಗ್ಗೆ ಇನ್ನೂ ಹಗ್ಗ-ಜಗ್ಗಾಟ ನಡೆಯುತ್ತಿದೆ. ಈ ಸಂಬಂಧ ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಬಗ್ಗೆಯೂ ಪ್ರಸ್ತಾಪವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ದೇವೇಗೌಡರ ಇಂದಿನ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಚುನಾವಣಾ ಕಾರ್ಯತಂತ್ರ ರೂಪಿಸುವುದು ಸೇರಿದಂತೆ ಪಕ್ಷದ ಬೆಳವಣಿಗೆ, ಸಂಘಟನೆ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.ಅಲ್ಲದೆ, ಆಡಳಿತಾತ್ಮಕ ವಿಷಯಗಳ ಬಗ್ಗೆಯೂ ಹಲವು ಸಲಹೆಗಳನ್ನು ಗೌಡರಿಂದ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆಯಷ್ಟೆ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಿ.ಅಪಾಂಗ್ ಅವರು ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದರು.

ರಾಷ್ಟ್ರಮಟ್ಟದಲ್ಲಿ ಪಕ್ಷದ ಸಂಘಟನೆ, ರಾಜ್ಯದಲ್ಲಿ ಚುನಾವಣಾ ಸಿದ್ಧತೆ ಕುರಿತಂತೆ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಉತ್ತರ, ಬೀದರ್ ಸೇರಿದಂತೆ ಜೆಡಿಎಸ್ ಸ್ಪರ್ಧಿಸುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿಯೂ ಮಾತುಕತೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ನಿಗಮ-ಮಂಡಳಿಗಳು, ರಾಜಕೀಯ ಕಾರ್ಯದರ್ಶಿ, ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಚಾರದ ಬಗ್ಗೆಯೂ ಗೌಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ