ಮೈಸೂರು, ಫೆ.25- ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದಾಗಿದೆ ಎಂದು ಸಂಸದ ಧ್ರುವನಾರಾಯಣ್ ತಿಳಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಾ.1ರಂದು ನಡೆಯಲಿರುವ 34ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಮಾಧ್ಯಮಗಳು ಕಾರ್ಯ ನಿರ್ವಹಿಸುತ್ತವೆ ಎಂದರು.
ಸಂಸದ ಪ್ರತಾಪ್ಸಿಂಹ ಮಾತನಾಡಿ, ಮೈಸೂರಿನ ಪತ್ರಕರ್ತರು ಇಡೀ ರಾಜ್ಯಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜದಲ್ಲಿ ನಡೆಯುವ ಘಟನೆಗಳನ್ನು ಸುದ್ದಿಯಾಗಿಸಿ ಸಮಾಜದ ಅಭಿವೃದ್ಧಿಗೂ ಕೈ ಜೋಡಿಸಿದ್ದಾರೆ. ರಾಜಕಾರಣಿಗಳು ಹಾಗೂ ಪತ್ರಕರ್ತರ ಸಂಬಂಧ ಉತ್ತಮವಾಗಿದ್ದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಮೋಹನ್, ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಲೋಕೇಶ್ಬಾಬು, ಹಿರಿಯ ವರದಿಗಾರ ಅಂಶಿ ಪ್ರಸನ್ನಕುಮಾರ್ ಮತ್ತಿತರರಿದ್ದರು.