ಕಾಂಗ್ರೇಸ್-ಜೆಡಿಎಸ್ ಸ್ಥಾಯಿ ಸಮಿತಿ ಸಭೆ-ಬಿಜೆಪಿಯನ್ನು ಮಣಿಸುವ ಬಗ್ಗೆ ತೀರ್ಮಾನ

ಬೆಂಗಳೂರು,ಫೆ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವ ಮೂಲಕ ಬಿಜೆಪಿಯನ್ನು ಮಣಿಸುವ ಬಗ್ಗೆ ರಣನೀತಿ ರೂಪಿಸುವ ಬಗ್ಗೆ ಇಂದು ನಡೆದ ಕಾಂಗ್ರೆಸ್-ಜೆಡಿಎಸ್ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಎಂಬುದು ಮುಖ್ಯವಲ್ಲ. ಒಟ್ಟು ಹೆಚ್ಚು ಸೀಟು ಗೆಲ್ಲಬೇಕು, 28 ಸ್ಥಾನ ಗೆಲ್ಲಲು ಬೇಕಾದ ರಣನೀತಿಯನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಮುಂದಿನ ಎರಡು ಮೂರು ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉಭಯ ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ನಂತರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪರಸ್ಪರ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವರು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉಪಮುಖ್ಯಮಂತ್ರಿ ಪರಮೇಶ್ವರ್ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಸಂಖ್ಯೆ ಮುಖ್ಯವಲ್ಲ. ಕೋಮುವಾದಿ ಪಕ್ಷವನ್ನು ದೂರವಿಡಬೇಕೆಂಬುದೇ ಮುಖ್ಯ. ಈ ಹಿನ್ನೆಲೆಯಲ್ಲಿ ಚುನಾವಣೆ ರೂಪುರೇಷೆಗಳು ಹೇಗಿರಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ಕನಿಷ್ಟ 25 ಕ್ಷೇತ್ರಗಳಲ್ಲಿ ಜಯ ಗಳಿಸಲು ರಣನೀತಿಯನ್ನು ರೂಪಿಸಲಾಗುವುದು. ನಂತರ ಸಮನ್ವಯ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಸಚಿವ ಎಚ್.ಡಿ.ರೇವಣ್ಣಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ 10-12-14 ಎಂಬ ಸೀಟು ಮ್ಯಾಟ್ರಿಕ್ಸ್ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ನಮಗೆ ಗೆಲ್ಲುವುದಷ್ಟೇ ಮುಖ್ಯ. ಕ್ಷೇತ್ರವಾರು ಚರ್ಚೆ ನಡೆಸಿ ಬಿಜೆಪಿಯನ್ನು ದೂರವಿಡಲು ಒಟ್ಟಾಗಿ ಹೋರಾಟ ಮಾಡುತ್ತೇವೆ. 25 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ. ನಮ್ಮಲ್ಲಿ ಯಾವುದೇ ಗೊಂದಲ, ಪ್ರತಿಷ್ಠೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸೌಹಾರ್ದತಯುತವಾಗಿ ಚರ್ಚೆ ನಡೆಸಲಾಗಿದೆ.28 ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಯಾವ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಬಗ್ಗೆ ಸೂಕ್ಷ್ಮವಾಗಿ ಚರ್ಚಿಸಿ ಹೆಚ್ಚು ಸ್ಥಾನ ಗೆಲ್ಲಲು ಆದ್ಯತೆ ನೀಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ