ಆರ್ಥಿಕವಾಗಿ ಎಲ್ಲರೂ ಸಬಲರಾಗಬೇಕು-ಬಿಜೆಪಿ ಮುಖಂಡ ಆರ್.ಆಶೋಕ್

ಬೆಂಗಳೂರು, ಫೆ.27- ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಸರ್ಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕು ಎಂಬುದೇ ಬಿಜೆಪಿ ಉದ್ದೇಶ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು.

ಗಣೇಶಮಂದಿರ ವಾರ್ಡ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ಮಹಿಳೆಯರು ಸ್ವಯಂ ಉದ್ಯೋಗಿಗಳಾಗಬೇಕು ಎಂಬ ಉದ್ದೇಶದಿಂದ ಟೈಲರಿಂಗ್ ಮಿಷನ್, ಇಸ್ತ್ರಿ ಪೆಟ್ಟಿಗೆ ಮುಂತಾದ ಸಲಕರಣೆಗಳನ್ನು ನೀಡಲಾಗುತ್ತಿದೆ.

ಶ್ರೀಮಂತ ಮಕ್ಕಳಿಗೆ ಸಿಗುವ ಎಲ್ಲಾ ಸೌಲಭ್ಯಗಳೂ ಬಡ ವಿದ್ಯಾರ್ಥಿಗಳಿಗೂ ದೊರೆಯಲಿ ಎಂಬ ಉದ್ದೇಶದಿಂದ ಲ್ಯಾಪ್‍ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು. ಹೀಗಾಗಿ 15 ಕೋಟಿ ಸಾಲ ಸೌಲಭ್ಯವನ್ನು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿದೆ. ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸಲು ನಾವೇ ಮನೆ ಮನೆಗಳಿಗೆ ತೆರಳಿ ಸೌಲಭ್ಯ ಒದಗಿಸುತ್ತಿದ್ದೇವೆ ಎಂದು ಅಶೋಕ್ ಹೇಳಿದರು.

ಹಿಂದುಳಿದ ವರ್ಗದ ಎಲ್ಲ ಅರ್ಹ ಫಲಾನುಭವಿಗಳಿಗೆ ಶಾಸಕರ ಅನುದಾನದಲ್ಲಿ ಸಹಾಯ ಮಾಡುವ ಮೂಲಕ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿಕಲಚೇತನರಿಗೆ ತ್ರಿಚಕ್ರ ವಾಹನ, ಇಸ್ತ್ರಿ ಪೆಟ್ಟಿಗೆ, ಬೈಸಿಕಲ್, ಕಾರ್ಪೆಂಟರಿ ಕಿಟ್ ಮತ್ತಿತರ ಸೌಲಭ್ಯಗಳನ್ನು ವಿತರಿಸಲಾಯಿತು.

ಗಣೇಶ ಮಂದಿರ ವಾರ್ಡ್ ಬಿಬಿಎಂಪಿ ಸದಸ್ಯೆ ಡಿ.ಎಚ್.ಲಕ್ಷ್ಮಿ ಉಮೇಶ್, ಬಿಜೆಪಿ ಮುಖಂಡ ಕಬ್ಬಾಳು ಉಮೇಶ್, ಶಾಮಲಾ, ಚಿತ್ರಾ, ಹೊಳ್ಳ ಮತ್ತಿತರರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ