ಬೆಂಗಳೂರು, ಫೆ.26- ಪ್ರತಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ ಮಾರ್ಚ್ ಅಂತ್ಯದೊಳಗೆ ನಿಗದಿಗೊಳಿಸಿರುವ ಗುರಿ ತಲುಪಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಕಾರ್ಯನಿರ್ವಾಹಕ ಎಂಜನಿಯರ್ಗಳು ನಿಗದಿಪಡಿಸಿರುವ ಗುರಿಗಳನ್ನು ತಲುಪಲಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದರು.
ಗ್ರಾಮೀಣ ರಸ್ತೆ ಅಭಿವೃದ್ಧಿ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ತಮ್ಮ ತಮ್ಮ ಜಿಲ್ಲೆಯಲ್ಲಿ ಸಿಇಒಗಳು ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ತಪ್ಪದೇ ಮಾಡಬೇಕೆಂದು ಸೂಚಿಸಿದರು.
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದರು. ಅಲ್ಲದೆ, ಈಗಾಗಲೇ ಬೇಸಿಗೆ ಆರಂಭವಾಗಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವರು, ಕುಡಿಯುವ ನೀರಿನ ವಿಚಾರದಲ್ಲಿ ತೃಪ್ತಿದಾಯಕ ಪ್ರಗತಿ ಸಾಧಿಸದ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.