ಬಿಳಿಗಿರಿರಂಗನಬೆಟ್ಟ, ಮಾ.2- ಉಗ್ರರ ಮೇಲಿನ ದಾಳಿಯಿಂದ ಬಿಜೆಪಿ ಲಾಭ ಪಡೆಯುತ್ತಿದೆ. ವೋಟ್‍ಗಾಗಿ ಯಾವ ಹಂತಕ್ಕಾದರೂ ಹೋಗುತ್ತಾರೆ ಎಂಬುದು ಯಡಿಯೂರಪ್ಪ ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಬಿಜೆಪಿ ಏರ್‍ಸ್ಟ್ರೈಕನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ.22 ಸೀಟ್‍ಗಾಗಿ 44 ಯೋಧರನ್ನು ಬಲಿಕೊಟ್ಟು ಷಡ್ಯಂತ್ರ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಮುಂದಿನ 2-3 ದಿನಗಳಲ್ಲಿ ಈ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಉಗ್ರರ ದಾಳಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮಂಡ್ಯ:
ನಮ್ಮ ತಂದೆ ವಿರುದ್ಧ ಜಾಧವ್ ಅಲ್ಲ ಪ್ರಧಾನಿ ನರೇಂದ್ರ ಮೋದಿ ನಿಂತರೂ ನಮ್ಮ ತಂದೆಯವರೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮ ಎದುರು ಯಾರು ಬೇಕಾದರೂ ಸ್ಪರ್ಧೆ ಮಾಡಲಿ.ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ನಾವೂ ಕೂಡ ಸ್ಪರ್ಧಿಸಲು ತಯಾರಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಸ್ಪರ್ಧೆ ಮಾಡುವುದು ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಆ ಮಟ್ಟಕ್ಕೆ ಬೆಳೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈಗಾಗಲೇ ಜೆಡಿಎಸ್ ಸಂಸದರಿದ್ದಾರೆ.ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ದಿನೇಶ್‍ಗುಂಡೂರಾವ್, ಸಿದ್ದರಾಮಯ್ಯ ಹಾಗೂ ಎಚ್.ಡಿ.ದೇವೇಗೌಡರು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಮಾಡಿಕೊಂಡಿರುವ ಮೈತ್ರಿಯಿಂದ ಯಾವುದೇ ದಕ್ಕೆ ಇಲ್ಲ. ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ ಎಂದರು.
ಬಡ್ತಿ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಕಾನೂನು ಮಂತ್ರಿ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.